ಮೊದಲನೆಯ ವಾಚನ: ಆದಿಕಾಂಡ 44:18-21, 23-29; 45:1-5
ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ: ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು. ಒಡೆಯರಾದ ತಾವು ಸೇವಕರಾದ ನಮ್ಮನ್ನು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾರೋ?’ ಎಂದು ಕೇಳಿದಿರಿ. ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು. ಅದಕ್ಕೆ ತಾವು ಸೇವಕರಾದ ನಮಗೆ, ‘ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ. ಅದಕ್ಕೆ ತಾವು, ‘ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ. “ತಮ್ಮ ಸೇವಕರಾದ ನಾವು ನಮ್ಮ ತಂದೆಯ ಬಳಿಗೆ ಹೋದಾಗ ಒಡೆಯರ ಮಾತನ್ನು ತಿಳಿಸಿದೆವು. ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ, ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು. ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ. ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟು ಹೋದ: ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ. ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು. ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನು ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ. ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು. ಜೋಸೆಫನು ತನ್ನ ಅಣ್ಣ ತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು. ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ” ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ. ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವ ರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.