“ಯೇಸು ಅನೇಕರನ್ನು ಗುಣಪಡಿಸುತ್ತಾರೆ ಮತ್ತು ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳನ್ನು ನಾಲ್ಕು ಸಾವಿರ ಜನರಿಗೆ ಹಂಚುತ್ತಾರೆ.”
ಯೇಸುಸ್ವಾಮಿ ಆ ಸ್ಠಳವನ್ನು ಬಿಟ್ಟು, ಗಲಿಲೇಯ ಸರೋವರದ ತೀರದಲ್ಲೇ ನಡೆದು, ಒಂದು ಗುಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು. ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯ ಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು. ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು. “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಯೇಸು ಕೇಳಿದರು. “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದು ಶಿಷ್ಯರು ಉತ್ತರಕೊಟ್ಟರು. ಆಗ ಜನ ಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು, ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಊಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು.
No comments:
Post a Comment