ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

27-11-2010 - ಪ್ರಾರ್ಥನೆ

ಸಂತ ಲೂಕನ ಶುಭ ಸಂದೇಶ -  21: 34-36


ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ದರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ,’ ಎಂದರು.

26-11-2010 - ನರಪುತ್ರನ ಪುನರಾಗಮನ

ಸಂತ ಲೂಕನ ಶುಭ ಸಂದೇಶ -  21: 29-33

ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳಿತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

25-11-2010 - ವಿನಾಶ ಕಾಲ

ಸಂತ ಲೂಕನ ಶುಭ ಸಂದೇಶ -  21: 20-28


"ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು"

“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ ಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರೆವೇರಬೇಕು. ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು ! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮೆತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯ ದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.

“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೊಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾ ಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ದಾರವು ಸಮೀಪಿಸಿತು.

22-11-2010 - ಧನವಂತರು - ಬಡ ವಿಧವೆ

ಸಂತ ಲೂಕನ ಶುಭ ಸಂದೇಶ -  21: 1-4


ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು


ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು. ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,’ ಎಂದರು.

16-11-2010 - ಜಕ್ಕಾಯ

ಸಂತ ಲೂಕನ ಶುಭ ಸಂದೇಶ - 19: 1-10

ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ.

ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದು ಹೋಗುತ್ತಿದ್ದರು. ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕ ವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ. ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಯೇಸು ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.

ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧ ಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸ ಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಆಗ ಯೇಸು, “ಇಂದು, ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ? ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.

15-11-2010 - ದೃಷ್ಟಿದಾನ

ಸಂತ ಲೂಕನ ಶುಭ ಸಂದೇಶ - 18: 35-43

ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥ ಮಾಡಿದೆ

ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು. ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು. “ನಜರೇತಿನ ಯೇಸು ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು. ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆ ತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು, “ಸುಮ್ಮನಿರುಎಂದು ಅವನನ್ನು  ಗದರಿಸಿದರು. ಅವನಾದರೋ,  ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದು ತರುವಂತೆ ಅಪ್ಪಣೆ ಮಾಡಿದರು. ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,”ಎಂದರು ಕ್ಷಣವೇ ಅವನಿಗೆ ದೃಷ್ಟಿ ಬಂದಿತು.  ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.

10-11-2010 - ವಿಶ್ವಾಸ - ಸ್ವಾಸ್ಥ್ಯ

ಸಂತ ಲೂಕನ ಶುಭ ಸಂದೇಶ - 17: 11-19

ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ

ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದು ಹೋಗುತ್ತಿದ್ದರು. ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠ ರೋಗದಿಂದ ನರಳುತ್ತಿದ್ದ ಹತ್ತು ಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು, ’ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರುಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು.

ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು. ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು  ಸಲ್ಲಿಸಿದನು. ಇವನೋ  ಸಮಾರಿಯದವನು ! ಆಗ ಯೇಸು, “ಹತ್ತುಮಂದಿ ಗುಣ ಹೊಂದಿದರಲ್ಲವೇ? ಮಿಕ್ಕ ಒಂಬತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು. ಅನಂತರ ಸಮಾರಿಯದವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.

9-11-2010

ಸಂತ ಯೊವಾನ್ನನ ಶುಭ ಸಂದೇಶ - 2: 13-22

ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು ದನ ಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಗಿ ಮಾಡಬೇಡಿ,’ ಎಂದು ಹೇಳಿದರು. ’ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.

ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸವಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅಚನ್ನು ಪುನ: ಎಬ್ಬಿಸುವೆನು,” ಎಂದು ಉತ್ತರಕೊಟ್ಟರು. ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು. ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾರಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

8-11-2010 - ವಿಶ್ವಾಸ

ಸಂತ ಲೂಕನ ಶುಭ ಸಂದೇಶ - 17:  1-6

"ಪಾಪಪ್ರಚೋದನೆಗಳು ಬಂದೇ ಬರುತ್ತವೆಆದರೆ ಅವು ಯಾರಿಂದ ಬರುತ್ತವೋ  ಅವನಿಗೆ ಧಿಕ್ಕಾರ"

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ನೀವಾದರೋ ಎಚ್ಚರಿಕೆಯಿಂದಿರಿ!

ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು. ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ದ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ’ಕ್ಷಮಿಸು’, ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,” ಎಂದರುಸ್ವಾಮಿ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, “ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಅತ್ತಿಮರಕ್ಕೆ, ’ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.

6-11-2010 - ಪ್ರಾಮಾಣಿಕತೆ

ಸಂತ ಲೂಕನ ಶುಭ ಸಂಧೇಶ - 16: 9-15

"ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ"

ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹ ಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?

“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.

ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು. ಅದಕ್ಕೆ ಯೇಸು,  “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,’ ಎಂದರು.

5-11-2010 - ಲೌಕಿಕತೆ

ಸಂತ ಲೂಕನ ಶುಭ ಸಂದೇಶ - 16: 1-8

"ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು."

ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ’ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಆ ಮೇಸ್ತ್ರಿ, ’ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.

ಮರುಕ್ಷಣ, ’ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ’ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ’ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ ’ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ’ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ’ನೂರು ಖಂಡುಗ ಗೋದಿ’ ಎಂದಾಗ, ’ಇಗೋ ನಿನ್ನ ಪತ್ರ, “ಎಂಬತ್ತು,” ಎಂದು ಬರೆ’, ಎಂದ. “ಈ ಅಪ್ರಾಮಾಣಿಕ  ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.  

04.11.2010 - ಕಾಣದೆ ಹೋದ ಕುರಿ

ಸಂತ ಲೂಕನ ಶುಭ ಸಂಧೇಶ - 15: 1-10

"ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ"

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳು ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದರೆ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ’ಕೆಳೆದು ಹೋಗಿದ್ದ ಕುರಿ ಸಿಕ್ಕಿತ್ತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೇ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ 
ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದು ಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳೆತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ’ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?  “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

03.11.2010 - ಪರಿತ್ಯಾಗ

ಸಂತ ಲೂಕನ ಶುಭ ಸಂಧೇಶ - 14: 25-33


"ನಿಮ್ಮಲ್ಲಿ ಯಾವನುತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ"



ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಚಿಸಿದರೆ, ಕೆಲಸವನ್ನು ಮುಗಿಸಲು  ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ’ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ದ ಯುದ್ದಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತುಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."

1-11-2010 - ವಿನಯಶೀಲರು ಭಾಗ್ಯವಂತರು;

ಸಂತ ಮತ್ತಾಯನ ಶುಭ ಸಂಧೇಶ - 5: 1-12

ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು.

ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು.
“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು;
 ಸ್ವರ್ಗಸಾಮ್ರಾಜ್ಯ ಅವರದು.
ದು:ಖಿಗಳು ಭಾಗ್ಯವಂತರು;
ದೇವರು ಅವರನ್ನು ಸಂತೈಸುವರು.
ವಿನಯಶೀಲರು ಭಾಗ್ಯವಂತರು;
ದೇವರ ವಾಗ್ದತ್ತ ನಾಡಿಗೆ ಭಾಧ್ಯಸ್ಥರು ಅವರು.
ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು;
ದೇವರು ಅವರಿಗೆ ತೃಪ್ತಿಯನ್ನೀಯುವರು.
ದಯಾವಂತರು ಭಾಗ್ಯವಂತರು;
ದೇವರ ದಯೆ ಅವರಿಗೆ ದೊರಕುವುದು.
ನಿರ್ಮಲ ಹೃದಯಿಗಳು ಭಾಗ್ಯವಂತರು;
ಅವರು ದೇವರನ್ನು ಕಾಣುವರು.
ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು;
ಅವರು ದೇವರ ಮಕ್ಕಳೆನಿಸಿಕೊಳ್ಳುವರು.
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು;
ಸ್ವರ್ಗಸಾಮ್ರಾಜ್ಯ ಅವರದು.
“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.

29-10-2010 - ಸಬ್ಬತ್ ದಿನ

ಸಂತ ಲೂಕನ ಶುಭ ಸಂದೇಶ - 14: 1-6

"ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವೂ ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?"

ಅಂದು ಸಬ್ಬತ್ ದಿನ, ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. “ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವೂ ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು. ಅದಕ್ಕೂ ಅವರು ನಿರುತ್ತರರಾದರು.

28-10-2010 - ಪ್ರೇಷಿತರು

ಸಂತ ಲೂಕನ ಶುಭ ಸಂದೇಶ - 6: 12-19

ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ’ಪ್ರೇಷಿತರು’ ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.

ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನ ಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯ ಶಕ್ತಿ ಹರಿದು ಎಲ್ಲರನ್ನೂ ಗುಣ ಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

27-10-2010 - ಜೀವೋದ್ಧಾರ

ಸಂತ ಲೂಕನ ಶುಭ ಸಂದೇಶ - 13: 22-30

 “ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು"

ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಆಗ ಒಬ್ಬನು, “ಸ್ವಾಮಿ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು;  ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, 'ಸ್ವಾಮೀ,  ನಮಗೆ ಬಾಗಿಲು ತೆರೆಯಿರಿ,’ಎಂದು ನೀವು ಕೇಳುವಿರಿ. ಅದಕ್ಕೆ ಅವನು, ’ನೀವು ಎಲ್ಲಿಯವರೋ ನಾನು ಅರಿಯೆಎನ್ನುವನು. ಆಗ ನೀವು, ’ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನ:, ನೀವು ಎಲ್ಲಿಯವರೋ ನಾನರಿಯೆ.  ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ, ’ ಎಂದು ಸ್ಪಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!! ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. “ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.