ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - 5:20-26
"ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.""ನರಹತ್ಯೆ ಮಾಡಬೇಡ: ನರಹತ್ಯೆ ಮಾಡುವವನು ನ್ಯಾಯ ತೀರ್ಪಿಗೆ ಗುರಿಯಾಗುವನು" ಎಂದು ಪೂರ್ವಿಕರು ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ : ತನ್ನ ಸೋದರನ ಮೇಲೆ ನಿಷ್ಕಾರಣವಾಗಿ ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯ ತೀರ್ಪಿಗೆ ಈಡಾಗುವನು;ತನ್ನ ಸೋದರನ ತುಚ್ಛೀಕರಿಸುವವನು ನ್ಯಾಯ ಸಭೆಯ ವಿಚಾರಣೆಗೆ ಗುರಿಯಾಗುವನು.ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟು ಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನ ಮಾಡಿಕೊ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು. ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗ ಮಧ್ಯದಲ್ಲೇ ಅವನೊಡನೆ ಬೇಗ ಸಂಧಾನ ಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲಿಸರ ವಶಕ್ಕೆ ಬಿಡಬಹುದು.ಅನಂತರ ನಿನಗೆ ಸೆರೆವಾಸ ಪ್ರಾಪ್ತಿಯಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು, ಇದನ್ನು ನೆನಪಿನಲ್ಲಿಡು."
No comments:
Post a Comment