"ದೋಣಿಯ ಬಲಗಡೆ ಬೆಲೆ ಬೀಸಿರಿ;ಮೀನುಗಳು ಸಿಗುತ್ತವೆ"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೂಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: ಸಿಮೋನ ಪೇತ್ರನು,ದಿದಿಮನೆಂಬ ತೋಮನು, ಗಲಿಲೇಯದ ಕಾನ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು. ಆಗ ಸಿಮೋನ ಪೇತ್ರನು," ನಾನು ಮೀನು ಹಿಡಿಯಲು ಹೋಗುತ್ತೇನೆ," ಎಂದನು.ಮಿಕ್ಕವರು,"ನಾವೂ ನಿನ್ನೊಡನೆ ಬರುತ್ತೇವೆ," ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು.ಆ ರಾತ್ರಿಯೆಲ್ಲಾ ಅವರಿಗೆ ಒಂದೂ ಮೀನೂ ಸಿಗಲಿಲ್ಲ.
ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು.ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ. ಯೇಸು ಅವರಿಗೆ," ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?" ಎಂದು ಕೇಳಿದರು. "ಏನೂ ಇಲ್ಲ", ಎಂದರು ಅವರು. "ದೋಣಿಯ ಬಲಗಡೆ ಬೆಲೆ ಬೀಸಿರಿ;ಮೀನುಗಳು ಸಿಗುತ್ತವೆ" ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆ ಹೋಯಿತು. ಆಗ ಯೇಸುವಿನ ಆಪ್ತ ಶಿಷ್ಯನು ಪೇತ್ರನಿಗೆ,"ಅವರೇ ಪ್ರಭು" ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರಿ ಮೈಯಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು. ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.
ಯೇಸು ಅವರಿಗೆ ,"ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ," ಎಂದು ಹೇಳಿದರು. ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದು ತಂದನು. ಬೆಲೆಯ ತುಂಬ ದೊಡ್ಡ ಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವರಿಗೆ," ಬಂದು ಊಟ ಮಾಡಿ," ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ," ನೀವು ಯಾರು?" ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು; ಹಾಗೆಯೇ ಮೀನನ್ನೂ ಕೊಟ್ಟರು. ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
No comments:
Post a Comment