ಸಂತ ಲೂಕನು ಬರೆದ ಶುಭ ಸಂದೇಶ – 10: 25-37
“ದಯೆ ತೋರಿದವನೇ ನೆರೆಯವನು, ಹೋಗು, ನೀನೂ ಹಾಗೆಯೇ ಮಾಡು”
ಒಬ್ಬ ಶಾಸ್ತ್ರಜ್ಞನು ಎದ್ದು ಯೇಸು ಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು. ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು. ಅವನು, “ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು. ಯೇಸು, “ಸರಿಯಾಗಿ ಉತ್ತರಕೊಟ್ಟೆ. ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು? ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು.
“ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು ಬಡಿದು, ಅರಜೀವ ಮಾಡಿ ಅಲ್ಲೇ ಬಿಟ್ಟುಹೋದರು.ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂದಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ. ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೂಂಡು ಒಂದು ಛತ್ರಕ್ಕೆ ಕರೆದುಕೂಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ’ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ ಎಂದ’.
“ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, “ದಯೆ ತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
No comments:
Post a Comment