ಸಂತ ಲೂಕನ ಶುಭ ಸಂದೇಶ - 13: 22-30
“ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು"
ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಆಗ ಒಬ್ಬನು, “ಸ್ವಾಮಿ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, 'ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ಎಂದು ನೀವು ಕೇಳುವಿರಿ. ಅದಕ್ಕೆ ಅವನು, ’ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು. ಆಗ ನೀವು, ’ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನ:, ’ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ, ’ ಎಂದು ಸ್ಪಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!! ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. “ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.
No comments:
Post a Comment