ಸಂತ ಲೂಕನ ಶುಭ ಸಂದೇಶ - 6: 12-19
ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು
ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ’ಪ್ರೇಷಿತರು’ ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.
ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನ ಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯ ಶಕ್ತಿ ಹರಿದು ಎಲ್ಲರನ್ನೂ ಗುಣ ಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.
No comments:
Post a Comment