ಸಂತ ಮತ್ತಾಯನ ಶುಭ ಸಂಧೇಶ - 5: 1-12
ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು.
ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು.
“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು;
ಸ್ವರ್ಗಸಾಮ್ರಾಜ್ಯ ಅವರದು.
ದು:ಖಿಗಳು ಭಾಗ್ಯವಂತರು;
ದೇವರು ಅವರನ್ನು ಸಂತೈಸುವರು.
ವಿನಯಶೀಲರು ಭಾಗ್ಯವಂತರು;
ದೇವರ ವಾಗ್ದತ್ತ ನಾಡಿಗೆ ಭಾಧ್ಯಸ್ಥರು ಅವರು.
ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು;
ದೇವರು ಅವರಿಗೆ ತೃಪ್ತಿಯನ್ನೀಯುವರು.
ದಯಾವಂತರು ಭಾಗ್ಯವಂತರು;
ದೇವರ ದಯೆ ಅವರಿಗೆ ದೊರಕುವುದು.
ನಿರ್ಮಲ ಹೃದಯಿಗಳು ಭಾಗ್ಯವಂತರು;
ಅವರು ದೇವರನ್ನು ಕಾಣುವರು.
ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು;
ಅವರು ದೇವರ ಮಕ್ಕಳೆನಿಸಿಕೊಳ್ಳುವರು.
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು;
ಸ್ವರ್ಗಸಾಮ್ರಾಜ್ಯ ಅವರದು.
“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.
No comments:
Post a Comment