ಸಂತ ಲೂಕನ ಶುಭ ಸಂದೇಶ - 21: 20-28
"ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು"
“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ ಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರೆವೇರಬೇಕು. ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು ! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮೆತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯ ದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.
“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೊಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾ ಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ದಾರವು ಸಮೀಪಿಸಿತು.
No comments:
Post a Comment