ಮೊದಲನೇ ವಾಚನ ಧರ್ಮೋಪದೇಶಕಾಂಡ 4:32-34,39-40
"ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಬುತ ಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ. ದೇವರು ಅಗ್ನಿಜ್ವಾಲೆಯೊಳಗಿ೦ದ ಮಾತಾಡಿದ ಸ್ವರ ಕೇಳಿಸಿತಲ್ಲವೇ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ? ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹಾತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೋ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೇ ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರು ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು. ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ."
ಕೀರ್ತನೆ 33:4-5, 6, 9, 18-19, 20-23
ಶ್ಲೋಕ: ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ.
ಎರಡನೇ ವಾಚನ: ರೋಮನರಿಗೆ 8:14-17
ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು. ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, "ಅಪ್ಪಾ ತಂದೆಯೇ" ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ. ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು. ಕ್ರಿಸ್ತ ಯೇಸುವಿನೊಡನೆ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು.ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.
ಶುಭಸಂದೇಶ: ಮತ್ತಾಯ 28: 16-20
ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: "ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ, ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ," ಎಂದರು.

No comments:
Post a Comment