ಮೊದಲನೇ ವಾಚನ: 1 ಅರಸುಗಳು 19: 19-21
ಎಲೀಯನು ಅಲ್ಲಿಂದ ಹೊರಟು ಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, "ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು," ಎಂದನು. ಅದಕ್ಕೆ ಎಲೀಯನು, "ಹೋಗಿ ಬಾ; ನಾನು ನಿನಗೆ ಮಾಡಬೇಕಾದ್ದನ್ನು ಮಾಡಿದ್ದೇನೆ," ಎಂದು ಉತ್ತರ ಕೊಟ್ಟನು. ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾ೦ಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣ ಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.
ಕೀರ್ತನೆ: 16: 1-2, 5, 7-8, 9-10
ಶ್ಲೋಕ: ಪ್ರಭೂ, ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ.
ಶುಭಸ೦ದೇಶ: ಮತ್ತಾಯ: 5: 33-37
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ’ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನ ಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ; ನಿಮ್ಮ ತಲೆಯ ಮೇಲೂ ಆಣೆಯಿಡ ಬೇಡಿ; ಹಾಗೆ ಆಣೆಯನಿಟ್ಟು ಅದರ ಒಂದು ಕೂದಲನ್ನಾದರು ಬೆಳ್ಳಗೆ ಅಥವ ಕಪ್ಪಗೆ ಮಾಡಲು ನಿಮ್ಮಿಂದಾಗದು. ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದದ್ದು ಪಿಶಾಚಿಯಿಂದ ಪ್ರೇರಿತವಾದುದು.
No comments:
Post a Comment