ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

24.06.2018 - ಸಾಧಾರಣ ಕಾಲದ ಹನ್ನೆರಡನೆಯ ಭಾನುವಾರ

ಸಂತ ಸ್ನಾನಿಕ ಯೊವಾನ್ನರ ಜಯಂತಿ 



ಮೊದಲನೇ ವಾಚನ ಯೆಶಾಯ 49:1-6 

ಕಿವಿಗೊಡಿ ನನ್ನ ದ್ವೀಪ ನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರಲ್ಲಿದ್ದಾಗಲೇ. ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ, ಮುಚ್ಚಿಟ್ಟಿಹನು ನನ್ನನ್ನು ತನ್ನ ಕರದ ನೆರಳಿನಲ್ಲಿ, ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನ್ನು ತನ್ನ ಬತ್ತಳಿಕೆಯಲ್ಲಿ ಆತನೆನಗೆ ಇಂತಂದ: "ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ," ಇಂತಂದುಕೊಂಡೆ ನಾನಾಗ ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ. ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು, ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲ್ಲಿ. ಮತ್ತೆ ಆತ ಇಂತೆಂದನು ನನಗೆ: "ಮಹಾತ್ಕಾರ್ಯವೇನೂ ಅಲ್ಲ, ನನ್ನ ದಾಸನಾದ ನನಗೆ ಕುಲಗಳನ್ನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲ್ಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟ ಕಡೆಯವರೆಗೆ." 

ಕೀರ್ತನೆ: 139:1-3, 13-15 ಕೀರ್ತನೆ ಕೇಳಿ
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ 



ಎರಡನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:22-26 

ಆನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, "ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೊರೈಸುವನು," ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದನು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, "ನಾನು ಯಾರೆಂದು ನೀವು ನೆನಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,' ಎಂದನು. "ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ ಮತ್ತು ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ. 


ಶುಭಸಂದೇಶ: ಲೂಕ 1:57-66, 80

ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿದ್ದರು. ಆದರೆ ಮಗುವಿನ ತಾಯಿ , "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು," ಎಂದಳು. ಅದಕ್ಕೆ ಅವರು, "ನಿನ್ನ ಬಂಧು ಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ," ಎಂದ ಹೇಳಿ, "ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?" ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ" ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು. ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, 'ಈ ಮಗು ಮುಂದೆ ಎಂಥವನಾಗುವನೋ!' ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನ‌ಲ್ಲೇ ವಾಸಿಸುತ್ತಿದ್ದನು.

No comments:

Post a Comment