ಮೊದಲನೇ ವಾಚನ:ಆಮೋಸ 8:4-6, 9-12
ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ, "ದವಸ ಧಾನ್ಯಗಳನ್ನು ಮಾರಬೇಕಲ್ಲ. ಈ ಅಮವಾಸ್ಯ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ. ತೊಲವನ್ನು ಹಿರಿದು ಮಾಡೋಣ. ಕಳ್ಳತಕ್ಕಡಿಯನ್ನು ಬಳಸೋಣ; ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ," ಎಂದುಕೊಳ್ಳುತ್ತೀರಿ, ಅಲ್ಲವೇ? ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: "ಆ ದಿನದಂದು ನಡು ಮದ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡು ಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು. ನಿಮ್ಮ ಕೊಂಡಾಟದ ದಿನಗಳನ್ನು ಗೋಳಾಟದ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು." ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: "ದಿನಗಳು ಬರಲಿವೆ ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ. ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿ ಹೋಗುವರು. ಆದರೂ ಅದು ಸಿಗದು."
ಕೀರ್ತನೆ: 119:2, 10, 20, 30, 40, 131
ಶ್ಲೋಕ: ಮಾನವನು ಜೀವಿಸುವುದು ದೇವರಾಡುವ ಪ್ರತಿಯೊಃದು ನುಡಿಯಿಂದ.
ಶುಭ ಸಂದೇಶ : ಮತ್ತಾಯ 9:9-13
ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನ್ನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸು ಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ "ಸಂಕದವರೂ", "ಪಾಪಿಷ್ಟರೂ" ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತ್ತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕ್ರತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, 'ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಟರನ್ನು" ಎಂದರು.
No comments:
Post a Comment