ಮೊದಲನೇ ವಾಚನ: ಯೆರೆಮೀಯ 15:10, 16-21
"ನನ್ನ ಹೆತ್ತ ತಾಯಿಯೇ. ನನ್ನ ಗತಿಯನ್ನು ಎನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಶಪಿಸುವವರೇ. ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ? ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ. ನನಗೇಕೆ ನಿರಂತರವಾದ ವೇದನೆ? ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?" ಅದಕ್ಕೆ ಸರ್ವೇಶ್ವರ: " ನೀನು ನನಗೆ ಅಭಿಮುಖವಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಛರಿಸುವೆಯಾದರೆ ನೀನು ನನ್ನ ಬಾಯಿಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ. ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ದ ಅವರು ಯುದ್ಧ ಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು. ಕ್ರೂರಿಗಳ ಕೈಯಿಂದ ರಕ್ಷಿಸುವೆನು" ಎಂದರು.
ಕೀರ್ತನೆ: 59:2-3,4, 10-11,17,18
ಶ್ಲೋಕ: ದೇವಾ, ಸಂಕಟದಲ್ಲೆನಗಾದ ಆಶ್ರಯಗಿರಿ ನೀವು.
ಶುಭಸಂದೇಶ: ಮತ್ತಾಯ 13:44-46
"ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು, ಇದನ್ನು ಒಬ್ಬನು ಪತ್ತೆ ಹಚ್ಚಿ ಅಲ್ಲಿಯೇ ಮುಚ್ಛಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡು ಕೊಂಡುಬಿಡುತ್ತಾನೆ. "ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತು ರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೇ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ" ಎಂದರು ಯೇಸುಸ್ವಾಮಿ.
No comments:
Post a Comment