ಪ್ರವಾದಿ ಯೆಶಾಯನ
ಗ್ರಂಥದಿಂದ ವಾಚನ 7:1-9
ಅದು ಅಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ
ಮಗನೂ ಇಸ್ರಯೇಲಿನ ಅರಸನೂ ಆಗ ಪೆಕಹ ಎಂಬುವರು ಜೆರುಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ. ಸಿರಿಯರ ಸೈನಿಕರು ಈಗಾಗಲೇ
ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ
ಗಿಡಮರಗಳಂತೆ ನಡುಗಿದರು. ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು
: “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲು
ಹೋಗು. ಅಗಸರ ಹೊಲದ ಮೇಲೆ ಹಾದು ಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ
ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :
ಜೋಕೆ, ಸುಮ್ಮನಿರು, ಹೆದರಬೇಡ.
ರೆಚೀನ, ಸಿರಿಯ ಮತ್ತು ಪೆಕಹ – ಇವರೆಲ್ಲರ
ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.
ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು
ಮಾಡಿದ್ದಾರೆ. ಜುದೇಯನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಅಕ್ರಮಿಸಿಕೊಳ್ಳೋಣ;
ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.
ಆದರೆ ಸ್ವಾಮಿ ಸರ್ವೇಶ್ವರನಾದ ನಾನು ನಿನಗೆ ಹೇಳುತ್ತೇನೆ. ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು
ನೆರವೇರುವುದಿಲ್ಲ. ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ,
ರಾಜನಾದ ರೆಚೀನನಿಗಿಂತ ದಮಸ್ಕಸ್ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ,
ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ
ರಾಷ್ಟ್ರವಾಗಿ ಉಳಿಯದು. ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್
ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ,
ನಿಮಗೆ ಸ್ಥಿರತೆ ಇರುವುದಿಲ್ಲ.”
ಕೀರ್ತನೆ 48:1-7
ಶ್ಲೋಕ : ಸರ್ವಶಕ್ತ
ಪ್ರಭುವನು ದೇವನಗರದಲ್ಲಿ ಕಂಡೆವು
ಸಂತ ಮತ್ತಾಯನು ಬರೆದ
ಶುಭಸಂದೇಶದಿಂದ ವಾಚನ 11: 20-24
ಯಾವ ಪಟ್ಟಣಗಳಲ್ಲಿ
ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ.
ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿ: “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ
ಮಾಡಿದ ಅದ್ಭುತ ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು
ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ
ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. ಎಲೈ ಕಫೆರ್ನವುಮ್ ಪಟ್ಟಣವೇ, ನೀನು
ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ,
ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. ಆದುದರಿಂದ ತೀರ್ಪಿನ ದಿನ ಸೊದೋಮಿನ
ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.
No comments:
Post a Comment