ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

07.08.2018

ಮೊದಲನೇ ವಾಚನ: ಯೆರೆಮೀಯ 30: 1-2, 12-15, 18-22 

ರ್ವೇಶ್ವರಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು: "ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ; "ನಿನ್ನ ಗಾಯಗಳು ಗುಣ ಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು, ನಿನ್ನ ಪರ ವಾದಿಸುವವರಿಲ್ಲ, ನಿನ್ನ ಪ್ರಾಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ. ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನುಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ. 'ಅಯ್ಯೇ ನೋವು ನಿಲ್ಲದಿದೆ,' ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರವೆ ಎಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿದೆ ಎಂದೇ ಇದನ್ನೆಲ್ಲ ನನಗೆ ಮಾಡಿದೆ. ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅವರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು. ಅದರ ಅರಮನೆ ಮೊದಲಿದ್ದ ಸ್ಥಳದಲ್ಲೇ ನೆಲೆಯಾಗಿ ನಿಲ್ಲುವುದು. ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು,  ಅವರು ಕೊಂಚವಾಗಿರುವರು.ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು. ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು. ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು.  ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು. ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು, ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು. ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನ್ನು ಸಮೀಪಿಸಲು ಧೈರ್ಯ ಗೊಳ್ಳುವವನಾರು? ಇದು ಸರ್ವೇಶ್ವರನ ನುಡಿ. ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು." 

ಕೀರ್ತನೆ: 102:16-18, 19-21, 29, 22-23 ಶ್ಲೋಕ: ಪ್ರಭು ಪುನರುದ್ಧರಿಸುವನು ಸಿಯೋನನು. 

ಶುಭಸಂದೇಶ: ಮತ್ತಾಯ 14:22-36

ದಾದಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆಚೆಯ ದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೆ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು. ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು ಎದುರು ಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು. ಆಗ ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದುಕೊಂಡೇ ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು,"ಭೂತ, ಭೂತ!" ಎಂದು ಚೀರಿದರು. ತಕ್ಷಣವೇ ಯೇಸು, "ಭಯಪಡಬೇಡಿ, ನಾನೇ. ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ," ಎಂದು ಅವರೊಡನೆ ಮಾತನಾಡಿದರು. ಆಗ ಪೇತ್ರನು, "ಸ್ವಾಮೀ, ನೀವೇ ಆದರೆ ನಾನು ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ," ಎಂದನು. ಯೇಸು, "ಬಾ" ಎಂದು ಕರೆಯಲು ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು. ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು.ಹಾಗೆಯೇ ಮುಳುಗಿ ಹೋಗಲಾರಂಭಿಸಿದನು. ಆಗ, "ಸ್ವಾಮೀ, ಕಾಪಾಡಿ, ಕಾಪಾಡಿ," ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, "ಅಲ್ಪ ವಿಶ್ವಾಸಿಯೇ ಏಕೆ ಸಂದೇಹಪಟ್ಟೆ?" ಎಂದರು. ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೆ ಗಾಳಿ ನಿಂತುಹೋಯಿತು. ದೋಣಿಯಲ್ಲಿದ್ದವರು "ನೀವು ನಿಜವಾಗಿಯೂ ದೇವರ ಪುತ್ರ!" ಎಂದು ಹೇಳಿ ಯೇಸುವನ್ನು ಆರಾಧಿಸಿದರು. ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು. ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗ ರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು. ಇವರು, "ನಿಮ್ಮ ಉಡುಪಿನ ಅಂಚನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು," ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.

No comments:

Post a Comment