ಸಾಧಾರಣ ಕಾಲದ ಹತ್ತೊಂಭತ್ತನೆಯ ವಾರ - ಶನಿವಾರ
ಮೊದಲನೇ ವಾಚನ: ಯೆಜೆಕಿಯೇಲ: 18: 1-10, 13, 30-32
ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ: "ಹೆತ್ತವರು ತಿಂದರು ಹುಳಿ ದ್ರಾಕ್ಷಿಯನ್ನು; ಚಳಿತು ಹೋದವು ಅವರ ಮಕ್ಕಳ ಹಲ್ಲುಗಳು" ಎಂಬ ಗಾದೆಯನ್ನು ನೀವು ಇಸ್ರಯೇಲ್ ನಾಡನ್ನು ಕುರಿತು ಹೇಳುವುದೇಕೆ? ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತ ಬೇಕಾಗುವುದಿಲ್ಲ. ಇಗೋ, ಸಕಲ ನರ ಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪ ಮಾಡುವ ಪ್ರಾಣಿಯೇ ಸಾಯುವನು. ಒಬ್ಬನು ಸದ್ಧರ್ಮಿಯಾಗಿಯಾಗಿ ನ್ಯಾಯ ನೀತಿಗಳನ್ನು ನಡೆಸಿ, ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲ ಮಾಡಿದವನ ಒತ್ತೆಯನ್ನು ಬಿಗಿಯಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ; ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣ ಕೊಡದೆ, ಅನ್ಯಾಯಕ್ಕೆ ಕೈ ಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯ ತೀರಿಸಿ, ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯ ಪರನಾಗಿಯೇ ನಡೆದರೆ, ಇಂಥವನು ಸದ್ದರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ: ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ, ಅಸಹ್ಯ ಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣ ಕೊಟ್ಟು, ಹಿಂಸಾಚಾರಿಯೂ, ರಕ್ತ ಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನ್ನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ. ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶ ಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ. ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿ ಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ: ಇಸ್ರಯೇಲ್ ವಂಶದವರೇ ನೀವು ಏಕೆ ಸಾಯಬೇಕು? ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ".
ಕೀರ್ತನೆ: 51: 12-13, 14-15, 18-19
ಶ್ಲೋಕ: ವಿಧೇಯನಾಗಿ ನಡೆವ ಸಿದ್ದ ಮನಸ್ಸನು ನೀಡು ಪ್ರಭು.
ಶುಭಸಂದೇಶ: ಮತ್ತಾಯ: 19:13-15
ಅನಂತರ ಕೆಲವರು ಚಿಕ್ಕ ಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು. ಆಗ ಯೇಸು, "ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ. ಸ್ವರ್ಗಸಾಮ್ರಾಜ್ಯ ಇಂಥವರದೇ," ಎಂದರು. ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟು ಹೋದರು.
This comment has been removed by a blog administrator.
ReplyDelete