ಸಾಧಾರಣ ಕಾಲದ 21ನೇ - ಸೋಮವಾರ
ಮೊದಲನೇ ವಾಚನ: 2 ಥೆಸಲೋನಿಯರಿಗೆ 1:1:5, 11-12
ನಮ್ಮ ಪುತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯರು ಬರೆಯುವ ಪತ್ರ. ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ದರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ. ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟ ಸಂಕಟಗಳನ್ನೂ ಚಿತ್ರ ಹಿಂಸೆಗಳನ್ನು ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ. ನೀವು ಅನುಭವಿಸುತ್ತಿರುವುದೆಲ್ಲಾ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗು ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು. ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾ ಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸ ಪ್ರೇರಿತ ಕಾರ್ಯಗಳು ಪೂರ್ಣವಾಗಲಿ. ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.
ಕೀರ್ತನೆ: 96: 1-2ಎ, 2ಬಿ-3, 4-5
ಶ್ಲೋಕ: ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ.
ಶುಭಸಂದೇಶ: ಮತ್ತಾಯ: 23: 13-22
"ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವು ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿ ಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತೀ ಕಠಿಣವಾದ ದಂಡನೆಗೆ ಗುರಿಯಾಗುವಿರಿ). ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗೆ ಜಲ ನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. "ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನು ಬದ್ದನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿಗೆಟ್ಟ ಮತಿ ಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಒಬ್ಬನು ಬಳಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನು ಬದ್ದನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿ ಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ. ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನಸ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.
No comments:
Post a Comment