ಸಾಧಾರಣ ಕಾಲದ 21ನೇ - ಗುರುವಾರ
ಮೊದಲನೇ ವಾಚನ: 1 ಕೊರಿಂಥಿಯರಿಗೆ: 1: 1-9
ಕ್ರಿಸ್ತ ಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀ ಸಭೆಯವರಿಗೂ ಹಾಗು ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯು ನಾಮ ಸ್ಮರಣೆಮಾಡುವ ಸರ್ವಜನರಿಗೂ ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ. ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಧಾನ ಲಭಿಸಲಿ! ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ನತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲಾ ದೃಷ್ಥಿಯಿಂದಲೂ ನೀವು ಶ್ರೀಮಂತರು, ಜ್ಞಾನ ಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ. ಇದಲ್ಲದೆ ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ. ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರು ನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯೂ ಇಲ್ಲ. ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗು ಸ್ಥಿರವಾಗಿ ಕಾಪಾಡುವರು. ತಮ್ಮ ಪುತ್ರನು ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸ ಪಾತ್ರರು.
ಕೀರ್ತನೆ: 145: 2-3, 4-5, 6-7
ಶ್ಲೋಕ: ದೇವಾ, ಮಾಡುವೆ ನಿನ್ನ ನಾಮಕೆ ನಮನ ಯುಗಯುಗಾಂತರಕ್ಕೂ
ಶುಭಸಂದೇಶ: ಮತ್ತಾಯ: 24: 42-51
ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕಣ್ಣ ಹಾಕಲು ಬಿಡನು, ಆಲ್ಲವೇ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ದರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಮಾಣಿಕನು ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ಧವಸ ನಾಣ್ಯಗಳನ್ನು ಅಳೆದು ಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಟೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂತವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನ್ನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ’ನನ್ನ ಯಜಮಾನ ತಡ ಮಾಡುವನು’ ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರ ಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡಬೇಕಾಗುವುದು.
No comments:
Post a Comment