ಸಾಧಾರಣ ಕಾಲದ ೨೨ನೇ - ಭಾನುವಾರ
ಮೊದಲನೇ ವಾಚನ; ಧರ್ಮೋಪದೇಶಕಾಂಡ 4:1-2, 6-8
"ಇಸ್ರಯೇಲರೇ, ಕೇಳಿ ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಭೋಧಿಸಿದ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು. ಇವುಗಳನ್ನು ಕೈಗೊಂಡು ಅನುಸರಿಸಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, "ಈ ದೊಡ್ಡ ಜನಾಂಗ ಎಂಥಾ ಜ್ಞಾನ ವಿವೇಕವುಳ್ಳ ಜನಾಂಗ", ಎಂದು ಮಾತನಾಡಿಕೊಳ್ಳುವರು. ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ? ನಾನು ಈ ದಿನ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆಯಾವ ಜನಾಂಗಕ್ಕೆ ಉಂಟು?"
ಕೀರ್ತನೆ 15:2-3, 3-4, 4-5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗಡಾರದಲ್ಲಿ ಬಿಡಾರಮಾಡಲು?
ಎರಡನೇ ವಾಚನ: ಯಕೋಬ 1:17-18, 21-22, 27
ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ. ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ನಿತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು. ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲಾ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗಿಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಢಾರ ಮಾಡಬಲ್ಲುದು. ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ. ಕಷ್ಟ ಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು, ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಕವಾದ ಮತ್ತು ನಿರ್ಮಲವಾದ ಧರ್ಮವೆನ್ನಿಸುತ್ತದೆ.
ಶುಭಸಂದೇಶ: ಮಾರ್ಕ 7:1-8, 14-15, 21-23
ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧಾವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು: ಇವೇ ಮೊದಲಾದ ಅನೇಕ ಅಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, "ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟ ಮಾಡುತ್ತಿದ್ದರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, "ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ. "ಬರಿಯ ಮಾತಿನ ಮನ್ನಣೆಯನೀಯುತ್ತ, ಹೃದಯವನ್ನು ದೂರವಿರಿಸುತ್ತ, ನರಕಲ್ಪಿತ ಕಟ್ಟಳೆಗಳನ್ನೇ ದೇವ ವಾಕ್ಯವೆಂದು ಉಪದೇಶಿಸುತ್ತಾ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು". "ನೀವು ದೇವರ ಆಜ್ಞೆಗಳನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಆನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, "ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ; ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಆನೈತಿಕತೆ, ಕಳ್ಳತನ, ಭಂಡತನ, ಅಸೂಯೆ, ಅಪದೂರು, ಅಹಾಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಬವಿಸಿ, ಅವನನ್ನು ಅಶುದ್ಧ ಮಾಡುತ್ತವೆ," ಎಂದರು.
No comments:
Post a Comment