ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.09.2018 - ಮಾತೆ ಮೇರಿಯ ಜನನೋತ್ಸವ

ಮಾತೆ ಮೇರಿಯ ಜನನೋತ್ಸವ



ಮೊದಲನೇ ವಾಚನ: ಮೀಕ 5:1-2 (ರೋಮನರಿಗೆ 8:28-30)

ಸಿಯೋನ್ ನಗರಿಯೇ, ನಿನ್ನ ಸೇನಾ ವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ,  ಮೂಲ, ಪುರಾತನವಾದುದು. ಅನಾದಿ ಕಾಲದಿಂದ ಬಂದುದು. ಇಂತಿರಲು ದಿನ ತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಆನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6ab, 6c
ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲ್ಲಿ ನನ್ನಾತ್ಮ

ಶುಭಸಂದೇಶ: ಮತ್ತಾಯ 1:1-16, 18-23 (1:18-23)

ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:  ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು, ಯೂದನಿಗೆ ತಾಮರ ಎಂಬುವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮಿನದಾಬ್, ಅಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬುವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಅಸನ್ ಹುಟ್ಟಿದರು. ಅಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಅಮೋನ್, ಅಮೋನನಿಗೆ ಯೋಷಿಯ ಹುಟ್ಟಿದರು. ಯೋಷಿಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ಧು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ "ಕ್ರಿಸ್ತ" ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;  ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭವತಿಯಾಗಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೇಫನೆ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭ ಧರಿಸಿರುವುದು ಪವಿತ್ರಾತ್ಮರ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ಯೇಸು ಎಂದು ಹೆಸರಿಡಬೇಕು. ಏಕಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧರಮಾಡುವವನು ಆತನೇ," ಎಂದನು. "ಇಗೋ, ಕನ್ಯಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು "ಇಮ್ಯಾನುವೇಲ್" ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. "ಇಮ್ಯಾನುವೇಲ್" ಎಂದರೆ "ದೇವರು ನಮ್ಮೊಡನೆ ಇದ್ದಾರೆ" ಎಂದು ಅರ್ಥ.

No comments:

Post a Comment