ಸಾಧಾರಣ ಕಾಲದ 24ನೇ ವಾರ
ಮೊದಲನೇ ವಾಚನ: 1 ಕೊರಿಂಥಿಯರಿಗೆ 12:31-13:13
ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ: ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝುಣಝುಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು, ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ, ಪ್ರೀತಿಯೊಂದಿಲ್ಲದಿರೆ ನಾ ಶೂನ್ಯ ಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ ದೇಹವನ್ನೇ ಸಜೀವ ದಹಿಸಲು ನೀಡೆ. ನಾನಾಗಿರೆ ಪರಮ ಪ್ರೀತಿ ವಿಹೀನ, ಏನದು ಜೀವನ, ನನಗೇನದು ಪ್ರಯೋಜನ? ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕ್ಕೆ, ಮರ್ಮಕ್ಕೆ, ಮೆರೆತಕ್ಕೆ, ಮತ್ಸರಕ್ಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕ್ಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ, ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ, ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ. ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನ್ನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವರನ್ನೆ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ ಎಂಬುದ ನೀನರಿ.
ಕೀರ್ತನೆ: 33:2-3, 4-5, 12, 22
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ.
ಶುಭಸಂದೇಶ: ಲೂಕ 7:31-35
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, "ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ? ಪೇಟೆಬೀದಿಗಳಲ್ಲಿ ಕುಳಿತು, 'ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ' ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಅಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು "ಅವನಿಗೆ ದೆವ್ವ ಹಿಡಿದಿದೆ," ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, 'ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ, ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.
No comments:
Post a Comment