ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11
ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಡವಾಗಿ ವಿಶ್ವಾಸಿಸಿದರೆ ನೀವು ಜೀವೋದ್ದಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತ ಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲು ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನಗ್ರಹದಿಃದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ, ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.
ಕೀರ್ತನೆ: 118:1b-2, 16ab-17, 28
ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ
ಶುಭಸಂದೇಶ: ಲೂಕ 7:36-50
ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು. ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಬಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾ ನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಗೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನು ಹಚ್ಚಿದಳು. ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, 'ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು' ಎಂದು ತನ್ನೊಳಗೇ ಅಂದುಕೊಂಡನು. ಅದಕ್ಕೆ ಯೇಸು, "ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ," ಎಂದರು. ಸಿಮೋನನು, "ಅದೇನು ಹೇಳಿ ಗುರುವೇ", ಎಂದನು. ಆಗ ಯೇಸು, "ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆಸಾಲ ಕೊಡಬೇಕಾಗಿತ್ತು. ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ "ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?" ಎಂದು ಕೇಳಿದರು. ಅದಕ್ಕೆ ಸಿಮೋನನು, "ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ," ಎಂದನು. "ಸರಿಯಾಗಿ ಹೇಳಿದೆ," ಎಃದರು ಯೇಸು.ಆನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, "ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣೀರಿನಿಂದ ತೊಳೆದು ತಲೆಕೂದಲಿನಿಂದ ಒರೆಸಿರುವಳು. ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಆಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ; ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿದೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ," ಎಂದರು. ಆನಂತರ ಯೇಸು ಆ ಮಹಿಳೆಗೆ : ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, "ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?" ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು. ಯೇಸು ಆಕೆಗೆ, "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು," ಎಂದರು.
No comments:
Post a Comment