ಸಾಧಾರಣ ಕಾಲದ 26ನೇ ಶುಕ್ರವಾರ
ಮೊದಲನೇ ವಾಚನ: ಯೋಬ 38:1, 12-21, 40:3-5

ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು. "ನಿನ್ನ ಜೀವಮಾನದಲ್ಲಿ ಎಂದಾದರೂ 'ಅರುಣೋದಯವಾಗಲಿ' ಎಂದು ಆಜ್ಞಾಪಿಸಿರುವೆಯಾ? 'ಧರಣಿಯ ಅಂಚುಗಳನ್ನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು' ಎಂದು ಅದಕ್ಕೆ ಅಪ್ಪಣೆಮಾಡಿದೆಯಾ? ಮುದ್ರೆ ಒತ್ತಿದ ಜೇಡಿ ಮಣ್ಣಿನಂತೆ ಭೂಮಿ ರೂಪ ತಾಳುತ್ತದೆ. ಅದು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುತ್ತದೆ. ದುರುಳರಿಂದ ಬೆಳಕನ್ನು ಹಿಂತೆಗೆದುಕೊಳ್ಳಲಾಗುವುದು. ಅವರು ಎತ್ತಿದ ಕೈಯನ್ನು ಮುರಿಯಲಾಗುವುದು. ನಿನೆಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ? ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ? ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವೂ ನಿನಗೆ ತಿಳಿದಿದ್ದರೆ ಹೇಳು, ನೋಡೋಣ! ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ? ನೀವು ಅವುಗಳನ್ನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕ್ಕೆ ಹಾದಿಯನ್ನು ಕಂಡು ಹಿಡಿಯಬಲ್ಲೆಯಾ? ಇದನ್ನು ಬಲ್ಲೆಯಾದರೆ ನೀನು ಆಗಲೇ ಹುಟ್ಟಿದ್ಧಿರಬೇಕು ಮತ್ತು ಈಗ ಬಹಳ ವೃದ್ಧನಾಗಿರಬೇಕು!" ಆಗ ಯೋಬನು ಸರ್ವೇಶ್ವರಸ್ವಾಮಿಗೆ ಇಂತೆಂದನು; "ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯಿಯ ಮೇಲೆ ಕೈಯಿಡುವೆ ಮೌನತಾಳಿ. ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.
ಕೀರ್ತನೆ: 139:1-3, 7-8, 9-10, 13, 14ab
ಶ್ಲೋಕ: ಪ್ರಭೂ ನಡೆಸೆನ್ನನು ಆ ಸನಾತನ ಪಥದಲಿ.
ಶುಭ ಸಂದೇಶ : ಲೂಕ 10:13-16
"ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ ನಿಮ್ಮಲ್ಲಿ ಮಾಡಿದ ಅದ್ಬುತ ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳೆದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು. ಎಲೈ ಕಫೆರ್ನವುಮ್ ಪಟ್ಟಣವೇ. ನೀನು ಸ್ವರ್ಗಕ್ಕೆರುವೆ," ಎಂದು ನೆನಸುತ್ತಿಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ," ಎಂದರು ಯೇಸುಸ್ವಾಮಿ. ಆನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, "ನಿಮ್ಮನ್ನು ಆಲಿಸುವನು ನನ್ನನ್ನೇ ಆಲಿಸುತ್ತಾನೆ: ನಿಮ್ಮನ್ನು ಅಲಕ್ಷ್ಯ ಮಾಡುವವನು ನನ್ನನ್ನೆ ಅಲಕ್ಷ್ಯ ಮಾಡುತ್ತಾನೆ ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯ ಮಾಡುತ್ತಾನೆ," ಎಂದರು.
No comments:
Post a Comment