ಸಾಧಾರಣ ಕಾಲದ 27ನೇ - ಶುಕ್ರವಾರ
ಮೊದಲನೇ ವಾಚನ: ಗಲಾತ್ಯರಿಗೆ: 3: 7-14

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, "ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು," ಎಂದು ಲಿಖಿತವಾಗಿದೆ. ಇದಲ್ಲದೆ ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು. ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, "ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ" ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಲಿಲ್ಲ. ಬದಲಿಗೆ, "ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ," ಎಂದು ಬರೆಯಲಾಗಿದೆ. "ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು," ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪ ಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು. ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.
ಕೀರ್ತನೆ: 111: 1ಬಿ-2, 3-4, 5-6
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ.
ಶುಭಸಂದೇಶ: ಲೂಕ: 11: 15-26
ಆದರೆ ಅವರಲ್ಲಿ ಕೆಲವರು, "ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ," ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತ ಕಾರ್ಯವನ್ನು ಮಾಡಿ ತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು, "ಅಂತಃ ಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ದ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. "ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯಲ್ಲಾ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂದಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು ಸುಲಿಗೆಯನ್ನು ಹಂಚಿಕೊಡುತ್ತಾನೆ. ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ," ಎಂದರು. ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, "ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ’ನಾನು ಬಿಟ್ಟು ಬಂದ ನನ್ನ ಮನೆಗೇ ಹಿಂದಿರುಗುತ್ತೇನೆ.’ ಎಂದುಕೊಳ್ಳುತ್ತದೆ. ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನು ಎಲ್ಲವೂ ಚೊಕ್ಕಟವಾಗಿರುವುದನ್ನು ಕಾಣುತ್ತದೆ. ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲೆಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವ ಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ," ಎಂದರು.
ಚಿಂತನೆ: ಕೆಟ್ಟದನ್ನು ಹೊರ ಹಾಕುವುದು ಮಾತ್ರ ಮುಖ್ಯವಲ್ಲ, ಕೆಟ್ಟದ್ದು ಹೊರ ಹೋದ ಮೇಲೆ ಮನವು ಖಾಲಿ ಬೀಳದಂತೆ ಅಲ್ಲಿ ಒಳ್ಳೆಯದನ್ನು ತುಂಬುವುದೂ ಅಷ್ಟೇ ಮುಖ್ಯ.
ಚಿಂತನೆ: ಕೆಟ್ಟದನ್ನು ಹೊರ ಹಾಕುವುದು ಮಾತ್ರ ಮುಖ್ಯವಲ್ಲ, ಕೆಟ್ಟದ್ದು ಹೊರ ಹೋದ ಮೇಲೆ ಮನವು ಖಾಲಿ ಬೀಳದಂತೆ ಅಲ್ಲಿ ಒಳ್ಳೆಯದನ್ನು ತುಂಬುವುದೂ ಅಷ್ಟೇ ಮುಖ್ಯ.
No comments:
Post a Comment