ಸಾಧಾರಣ ಕಾಲದ 28ನೇ - ಶುಕ್ರವಾರ
ಮೊದಲನೇ ವಾಚನ: ಎಫೆಸಿಯರಿಗೆ: 1:11-14
ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ನೀವು ಸಹ ಸತ್ಯ ವಾಕ್ಯವನ್ನು ಅಂದರೆ, ನಿಮಗೆ ಜೀವೋದ್ದಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ಥ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.
ಕೀರ್ತನೆ: 33: 1, 2,4, 5, 12,13
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ.
ಶುಭಸಂದೇಶ: ಲೂಕ: 12: 1-7
ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, "ಫರಿಸಾಯರ ’ಹುಳಿ ಹಿಟ್ಟಿನ’ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟ ಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು," ಎಂದರು. "ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ: ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿ ಹೇಳುತ್ತೇನೆ. ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು," ಎಂದರು ಯೇಸುಸ್ವಾಮಿ.
No comments:
Post a Comment