ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.12.2018

ಮೊದಲನೇ ವಾಚನ: 1ಯೊವಾನ್ನ  2:18-21

ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿತವಾಯಿತೆಂದು ನಮಗೆ ತಿಳಿದುಬರುತ್ತದೆ. ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದಾಗಿ ಸ್ಪಷ್ಟವಾಗಿ ಕಂಡುಬರುತ್ತದೆ. ನೀವಾದರೋ ಪರಿಶುದ್ದವಾದವರಿಂದ ಅಭಿಷಿಕ್ತರಾಗಿದ್ದೀರಿ, ಸತ್ಯವನ್ನು ಅರಿತವರಾಗಿದ್ದೀರಿ. ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ. ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸಿದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.

ಕೀರ್ತನೆ: 96:1-2, 11-12, 13 

ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು.

ಶುಭಸಂದೇಶ: ಯೊವಾನ್ನ  1:1-18

ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ಧ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಸವಿಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಚೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ ದೇವರಿಂದಲೇ ಆದುದು. ಆದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಟರು. ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿಧನು.  ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಳದಲ್ಲಿರುವ, ಸ್ವಂತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

30.12.2018

ಮೊದಲನೇ ವಾಚನ: 1  ಸಮುವೇಲ 1:20-22, 24- 28

ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. " ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದು" ಎಂದು ಹೇಳಿ ಆ ಮಗುವಿಗೆ 'ಸಮುವೇಲ' ಎಂದು ಹೆಸರಿಟ್ಟಳು. ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಶಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ದನಾದ. ಹನ್ನಳು, "ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ," ಎಂದು ಹೇಳಿದಳು. ಆನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನುಹಾಗೂ ಒಂದು ತಿತೀ ದ್ರಾಕ್ಷಾರಸವನ್ನೂ ತಂದಿದ್ದರು. ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಹನ್ನಳು ಏಲಿಗೆ, "ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಸರ್ವೇಶ್ವರನನ್ನ ಪ್ರಾರ್ಥನೆಯ ಫಲವಾಗಿ  ಅನುಗ್ರಹಿಸಿದ ಮಗನು ಇವನೇ. ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೆ ಪ್ರತಿಷ್ಠಿತನು," ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.

ಕೀರ್ತನೆ: 84:2-3, 5-6, 9-10

ಶ್ಲೋಕ: ಸ್ವಾಮಿ ಸರ್ವೇಶ್ವರಾ, ನಿನ್ನ ಮಂದಿರದಲಿ ವಾಸಿಸುವವರು ಧನ್ಯರು.

ಎರಡನೇ ವಾಚನ: 1ಯೊವಾನ್ನ 3:1-2, 21-24

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೆ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವು ಅವರಂತೆಯೇ ಇರುತ್ತೇವೆಂದು ಬಲ್ಲೆವು.  ಏಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಪ್ರಿಯರೇ, ನಮ್ಮ ಮನಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ. ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ  ಅವರಿಂದ ಪಡಿಯುತ್ತೇವೆ ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ಅವರ ಆಜ್ಞೆ. ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲಸಿರುತ್ತಾನೆ. ದೇವರು ನಮ್ಮಲ್ಲಿ ನೆಲಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.

ಶುಭಸಂದೇಶ:ಲೂಕ 2:41-52


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ  ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, "ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ," ಎಂದಳು. ಅದಕ್ಕೆ ಉತ್ತರವಾಗಿ ಯೇಸು, "ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೇ?" ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು. ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.

29.12.2018

ಮೊದಲನೇ ವಾಚನ: 1 ಯೊವಾನ್ನ  2:3-11

ನಾವು ದೇವರ ಆಜ್ಞೆಗಳನ್ನು ಕೈಗೊಂಡುನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ. ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ. ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬದಿರುತ್ತದೆ. ತಾನು ದೇವರಲ್ಲಿ ನೆಲಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಪ್ರಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ ಸರಿ.ಅದರ ನೈಜಗುಣವು ನೀವು ಈಗಾಗಲೇ ಕೇಳಿರುವ ಸಂದೇಶ. ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ. "ನಾನು ಬೆಳಕಿನಲ್ಲಿದ್ದೇನೆ" ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು, ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.

ಕೀರ್ತನೆ: 96: 1-2, 2-3, 5-6

ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು. 

ಶುಭಸಂದೇಶ: ಲೂಕ 2:22-35

ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, 'ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರಿಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶಣವಾಗುವವರಿಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ಧನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು: "ನಿನ್ನ ಮಾತು ಸರ್ವೇಶ್ವರಾ, ನೆರವೇರಿತಂದು ಇನ್ನು ತೆರಳಬಿಡು ಶಾಂತಿಯಿಂದ. ನಿನ್ನ ದಾಸನಾದ ಎನ್ನನ್ನು, ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷಮಾಡಿರುವೆ. ಈತ ಅನ್ಯ ಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ." ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು  ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, "ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾವುವು. (ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)" ಎಂದು ಹೇಳಿದನು.

28.12.2018

ಮೊದಲನೇ ವಾಚನ:  1 ಯೊವಾನ್ನ  1:5-2:2

ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ. ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳಿದವರು ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ. ಪ್ರತಿಯಾಗಿ,  ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಗಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ, ಅಧರ್ಮಗಳಿಂದ ನಮ್ಮನ್ನು ಶುಧೀಕರಿಸುತ್ತಾರೆ.  ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ. ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ. ಪ್ರಿಯ ಮಕ್ಕಳೇ, ನೀವು ಪಾಪ ಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ  ಯಾರಾದರೂ ಪಾಪಮಾಡಿದ್ದೇ ಆದರೇ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು. ಅವರೇ ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.

ಕೀರ್ತನೆ: 124:2-3, 4-5, 7-8
ಶ್ಲೋಕ: ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು.

ಶುಭಸಂದೇಶ: ಮತ್ತಾಯ 2:13-18

ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದು ಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನು ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುಃನ ಹೇಳುವತನಕ ಅಲ್ಲೇ ಇರು." ಎಂದನು. ಅದರಂತೆ ಜೋಸೆಫನು ಕೊಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವತನಕ ಅಲ್ಲೇ ಇದ್ದನು. ಈ ಪ್ರಕಾರ," ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು" ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು. ಜ್ಯತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ  ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು. "ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು," ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.

27.12.2018

ಮೊದಲನೇ ವಾಚನ: 1 ಯೊವಾನ್ನ  1:1-4

ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯರ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಮಗೆ ಸಾರುತ್ತೇವೆ. ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.

ಕೀರ್ತನೆ: 97:1-2, 5-6, 11-12

ಶ್ಲೋಕ: ಸಜ್ಜನರೇ, ಪ್ರಭುವಿನಲ್ಲಿ ಆನಂದಿಸಿರಿ.

ಶುಭಸಂದೇಶ: ಯೊವಾನ್ನ  20:2-8

ವಾರದ ಮೊದಲನೆಯ ದಿನ ಮಗ್ದಲದ ಮರಿಯಳು. ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ಧಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ."  ಎಂದು ಹೇಳಿದಳು. ಇದನ್ನು ಕೇಳಿ ಪೇತ್ರನು ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. ಅವನು ಬಗ್ಗಿ ನೋಡಿದಾಗ ಅಲ್ಲಿ ನಾರು ಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ಧಿರುವುದನ್ನು ಕಂಡನು. ಯೇಸುವಿನ ತಲೆಗೆ ಸುತ್ತಿದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ  ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಸಮಾಧಿಯನ್ನು ಮೊದಲು ತಲುಪಿದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.

26.12.2018

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:8-10; 7:54-59


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮದ್ಯೆ ಅದ್ಬುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು 'ಬಿಡುಗಡೆ ಹೊಂದಿದವರು' ಎಂಬುವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ  ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.

ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶವದಲ್ಲಿ ನಿಂತಿರುವ ಯೇಸುವನ್ನೂ ಕಂಡು, "ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ," ಎಂದನು. ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು. ಅವರು ತನ್ನ ಮೇಲೆ ಕಲ್ಲು ಬೀರುತ್ತಿದ್ದಾಗ ಸ್ತೇಫನನು, "ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ," ಎಂದು ಪ್ರಾರ್ಥಿಸಿದನು.

ಕೀರ್ತನೆ: 31:3-4, 6, 8, 16, 17
ಶ್ಲೋಕ: ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ.

ಶುಭಸಂದೇಶ: ಮತ್ತಾಯ 10:17-22

ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೂದ್ಧಾರವನ್ನು ಹೊಂದುವನು.

25.12.2018

ಸರ್ವರಿಗೂ ಕ್ರಿಸ್ತ ಜಯಂತಿಯ ಶುಭಾಶಯಗಳು. ಕ್ರಿಸ್ತ ಜನನ ನಮ್ಮೆಲ್ಲರಿಗೂ ಹರುಷದ ಜೊತೆಗೆ ಅಧ್ಯಾತ್ಮಿಕ ಬೆಳಕನ್ನು ಹೊತ್ತು ತರಲಿ ಎಂದು ಹಾರೈಸುವ ಜೀವ ವಾಕ್ಯ ತಂಡ 

ಮೊದಲನೇ ವಾಚನ: ಯೆಶಾಯ 52:7-10

ಶುಭಕರ ಸಮಾಚಾರವನು ತರುವ, ಶಾಂತಿಸಮಾಧಾನವನು ಸಾರುವ, ಸಂತಸದ ಸಂದೇಶವನು ಅರುಹುವ, ಜೀವೋದ್ಧಾರವನು ಪ್ರಕಟಿಸುವ, "ನಿನ್ನ ದೇವರೇ ರಾಜ್ಯಭಾರವಹಿಸುವ" ಎಂದು ಸಿಯೋನಿಗೆ ತಿಳಿಯಪಡಿಸುತ್ತ, ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಯಗಳು ಎಷ್ಟೊಂದು ಸುಂದರ! ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು: ಸರ್ವೇಶ್ವರ ಸಿಯೋನಿಗೆ ಮರಳಿ ಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತೆಯನು. ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ. ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು. ತಂದಿರುವನು ತನ್ನ ಜನರಿಗೆ ಸಮಾಧಾನವನು. ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.

ಕೀರ್ತನೆ: 98:1, 2-3, 3-4, 5-6

ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ, ನಮ್ಮ ದೇವ ಸಾಧಿಸಿದ ಜಯಗಳಿಕೆ.

ಎರಡನೇ ವಾಚನ: ಹಿಬ್ರಿಯರಿಗೆ 1:1-6
 
ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ;  ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ, ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೃವತ್ವದ ಪಡಿಯಚ್ಚು; ತಮ್ಮ ಶಕ್ತಿಯುಕ್ತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದು ಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲ ಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ. ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ, ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ  "ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ," ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ,  "ನಾನಾತನಿಗೆ ಪಿತನು, ಆತನೆನಗೆ ಪುತ್ರನು,".ಎಂದಾಗಲಿ ಹೇಳಿದ್ಧುಂಟೇ? ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ: " ದೇವದೂತರೆಲ್ಲರೂ ಆತನನ್ನು  ಆರಾಧಿಸಲಿ," ಎಂದಿದ್ದಾರೆ.

 ಶುಭಸಂದೇಶ: ಯೊವಾನ್ನ  1:1-18

ಜಗತ್ತು ಉಂಟಾಗುವ ಮೊದಲೇ 'ದಿವ್ಯವಾಣಿ' ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಃದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೊಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಧದಿಂದ ಅಲ್ಲ, ಶಾರೀರಕ ಇಚ್ಚೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು. ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಃದ ಅವರು ನನಗಿಂತಲೂ ಶ್ರೇಷ್ಟರು' ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಳದಲ್ಲಿರುವ ಸ್ವಂತ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

24.12.2018

ಮೊದಲನೇ ವಾಚನ: 2 ಸಮುವೇಲ  7:1-5, 8-12, 14, 16

ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸಿತ್ತಿದ್ದನು. ಒಂದು ದಿನ ಅವನು ಪ್ರವಾದಿನಾತಾನನಿಗೆ, "ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!" ಎಂದನು. ಆದಕ್ಕೆ ನಾತಾನನು ಸಮ್ಮತಿಸಿ, "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ," ಎಂದನು. ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದನು: "ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: 'ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ "ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆನೆಂದು ತಿಳಿಸು; 'ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ. ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು. ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು. ಪೂರ್ವ ಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯ ಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚಿಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರ ಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ಆದರೆನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟು ಹೋಗುವುದಿಲ್ಲ. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಂಹಾಸನ ಶಾಶ್ವತವಾಗಿರುವುದು.

ಕೀರ್ತನೆ: 89:2-3, 4-5, 27-29

ಶ್ಲೋಕ: ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು.

ಶುಭಸಂದೇಶ: ಲೂಕ 16: 7-9

ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಆರುಹಿಸಿರುವನು ಇಂತೆದು ನಮಗೆ: 'ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ' ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು. ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು . ಪಿತಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನೀತರಾಗಿ, ಸದ್ಬಕ್ತರಾಗಿ, ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ" ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ, ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ  ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.

23.12.2018

ಮೊದಲನೇ ವಾಚನ: ಮೀಕ 5:1-4

ಸಿಯೋನ್ ನಗರಿಯೇ, ನಿನ್ನ ಸೇನಾ ವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿ ಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಆನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 80:2-3, 15-16, 18-19

ಶ್ಲೋಕ: ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು.

ಎರಡನೇ ವಾಚನ: ಹಿಬ್ರಿಯರಿಗೆ 10:5-10

ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: "ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಆಣೆಮಾಡಿ ಕೊಟ್ಟಿರಿ ನನಗೆದೇಹವೊಂದನ್ನು. ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ." ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದುವಾದರೂ " ಬಲಿಯರ್ಪಣೆಗಳು, ಕಾಣಿಕೆಗಳು ದಹನಬಲಿಗಳು ಮತ್ತು ಪಾಪಪರಿಹಾರಕ ಬಲಿಗಳು ನಿಮಗೆ ಬೇಡವಾದವು; ಇವು ಯಾವುವೂ ನಿಮಗೆ ತರಲಿಲ್ಲ ತೃಪ್ತಿಯನು." ಎಂದು ಮೊದಲು ಹೇಳುತ್ತಾರೆ. ಆನಂತರ, "ಇಗೋ, ನಾ ಬಂದೆ, ನಿಮ್ಮ ಚಿತ್ತವನ್ನು ನೆರವೇರಿಸಲೆಂದೇ." ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ. ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನಿತರಾಗಿದ್ದೇವೆ.

ಶುಭಸಂದೇಶ: ಲೂಕ 1:39-45

ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ, ಹರ್ಷೋದ್ಗಾರದಿಂದ ಹೀಗೆಂದಳು: "ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು."

22.12.2018

ಮೊದಲನೇ ವಾಚನ: 1  ಸಮುವೇಲ  1:24-28

ಹನ್ನಳು ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗು ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು. ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಹನ್ನಳು ಏಲಿಗೆ, "ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ. ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೆ  ಪ್ರತಿಷ್ಠಿತನು," ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರ ಸ್ವಾಮಿಯನ್ನು ಆರಾಧಿಸಿದರು.




ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲ್ಲಿ.

ಶುಭಸಂದೇಶ: ಲೂಕ 1:46-56

ಆಗ ಹೀಗೆಂದು ಮರಿಯಳು ಹೊಗಳಿದಳು: "ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ! ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲ್ಲಿ! ತನ್ನ ದಾಸಿಯ ದೀನತೆಯನ್ನು ನೆನಪಿಗೆ ತಂದುಕೊಂಡನಾತ! ಧನ್ಯಳೆಂದು ಹೊಗಳುವರೆನ್ನನ್ನು ಇಂದಿನಿಂದ ಸರ್ವ ಜನಾಂಗ! ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ! ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ! ಆತನಲ್ಲಿ ಭಯಭಕ್ತಿಯುಳ್ಳವರಿಗೆ! ಆತನ ಪ್ರೀತಿ ತಲತಲಾಂತರದವರೆಗೆ! ಗರ್ವಹೃದಯಿಗಳನಾತ ಚದರಿಸಿರುವನು! ಪ್ರದರ್ಶಿಸಿರುವನು ತನ್ನ ಬಾಹುಬಲವನ್ನು! ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನ್ನು! ಏರಿಸಿರುವನು ಉನ್ನತಿಗೆ ದೀನದಲಿತರನ್ನು! ತೃಪ್ತಿಪಡಿಸಿರುವನಾತ ಹಸಿದವರನ್ನು ಮೃಷ್ಟಾನ್ನದಿ! ಹೊರದೂಡಿರುವನು ಸಿರಿವಂತರನು ಬರೀಗೈಯಲ್ಲಿ! ನೆರವಾದನು ತನ್ನ ದಾಸ ಇಸ್ರಯೇಲನಿಗೆ! ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ! ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ! ಅವನ ಸಂತತಿಗೆ, ಯುಗಯುಗಾಂತರದವರೆಗೆ! ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.

21.12.2018

ಮೊದಲನೇ ವಾಚನ: ಪರಮಗೀತೆ  2:8-14

ಅಗೋ, ನನ್ನ ಕಾಂತನ ಸಪ್ಪಳ! ಹಾರಿ ಬರುತಿಹನು ಬೆಟ್ಟಗಳ ಮೇಲೆ, ಜಿಗಿದು ಬರುತಿಹನು ಗುಡ್ಡಗಳ ಮೇಲೆ. ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲಿನಂತೆ. ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ, ಇಣುಕು ಹಾಕುತಿಹನು ಜಾಲಾಂತರಗಳಲಿ. ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು: 'ಎದ್ದು ಬಾ, ಪ್ರಿಯತಮೆ,  ಬಾ ನನ್ನೊಂದಿಗೆ, ಸುಂದರಿಯೇ, ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು. ಧರೆಯಲ್ಲೆಲ್ಲ ಹೂಗಳು ಅರಳಿವೆ, ನಲಿದು ಹಾಡುವ ಕಾಲ ಬಂದಿದೆ, ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ; ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಾಬಳ್ಳಿಗಳು ಹೂ ಬಿಟ್ಟಿವೆ, ಅದರ ಪರಿಮಳ ಹರಡುತ್ತಿದೆ." ಎದ್ದು ಬಾ, ನನ್ನ ಪ್ರೆಯಸಿಯೇ, ಬಾ ನನ್ನೂಂದಿಗೆ, ಸುಂದರಿಯೇ. ಬಂಡೆಯ ಬಿರುಕುಗಳಲ್ಲಿ, ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು, ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು!ನಿನ್ನ ರೂಪ ಎನಿತೋ ತಂಪು!

ಕೀರ್ತನೆ: 33:2-3, 11-12, 20-21

ಶ್ಲೋಕ: ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ, ಹಾಡಿರಿ ಆತನಿಗೆ ಕೀರ್ತನೆಯನು ನೂತನ.

ಶುಭಸಂದೇಶ: ಲೂಕ 1:39-45

ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ, ಹರ್ಷೋದ್ಗಾರದಿಂದ ಹೀಗೆಂದಳು: "ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ! ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ! ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ! ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು."

20.12.2018

 ಮೊದಲನೇ ವಾಚನ: ಯೆಶಾಯ 7:10-14 

ಪುನಃ ಸರ್ವೇಶ್ವರಸ್ವಾಮಿ ಅಹಾಜನಿಗೆ ಹೇಳಿದ್ದೇನೆಂದರೆ: "ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ, ಅದು ಪಾತಾಳದಷ್ಟು ಆಳದಲ್ಲೇಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು" ಎಂದರು. ಅದಕ್ಕೆ ಅಹಾಜನು "ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ. ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ" ಎಂದನು. ಆಗ ಯೆಶಾಯನು: "ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? ಆಗಲಿ, ಸರ್ವೇಶರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು," ಎಂದರು.

 ಕೀರ್ತನೆ: 24:1-2, 3-4, 5-6

 ಶ್ಲೋಕ: ಆಗಮಿಸುತಿಹನಿದೋ ಮಹಿಮಾವಂತ ರಾಜಾದಿರಾಜನು ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು.

 ಶುಭಸಂದೇಶ: ಲೂಕ 1:26-38

ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು " ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ಧಾರೆ!" ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. 'ಇದೆಂಥ ಶುಭಾಶಯ' ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, "ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ 'ಯೇಸು' ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು," ಎಂದನು. ಅದಕ್ಕೆ ಮರಿಯಳು, "ಇದು ಆಗುವುದಾದರು ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ  ಇಲ್ಲವಲ್ಲಾ?" ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, "ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು 'ದೇವರ ಪುತ್ರ' ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ‌ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ," ಎಂದನು. ಆಗ ಮರಿಯಳು, "ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ," ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

19.12.2018

ಮೊದಲನೇ ವಾಚನ: 13:2-7, 24-25

ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ. ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, "ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು  ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು," ಎಂದನು. ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, "ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. 'ಎಂಲ್ಲಿಂದ ಬಂದಿರಿ? ಎಂದು ನಾನು ಅವನನ್ನು ಕೇಳಲಿಲ್ಲ; ಅವನು ತನ್ನ ಹೆಸರನ್ನು ತಿಳಿಸಲಿಲ್ಲ. ಆದರೆ ಆತ ನನಗೆ, 'ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು.' ಎಂದು ಹೇಳಿದನು," ಎಂದಳು. ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ 'ಸಂಸೋನ' ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು. ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮದ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸ ತೊಡಗಿತು.

ಕೀರ್ತನೆ: 71:3-4, 5-6, 16-17

ಶ್ಲೋಕ: ನಿನ್ನ ಗುಣಗಾನ ನನ್ನ ಬಾಯ್ತುಂಬ ನಿನ್ನ ಘೋಷಣೆ ನನಗೆ ದಿನದಾದ್ಯಂತ.

 ಶುಭಸಂದೇಶ: ಲೂಕ 1:5-25

ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು. ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು. ಸರ್ವೇಶ್ವರನ ವಿಧಿ ನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು. ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು. ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು. ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ,  ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ ಭಕ್ತಸಮೂಹವು ಹೊರಗೆ ನಿಂತು ಪ್ರಾರ್ಥನೆ ಮಾಡುತ್ತಿತ್ತು. ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು. ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು. ದೂತನು ಅವನಿಗೆ, "ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡು ಮಗು ಹುಟ್ಟುವುದು. ನೀನು ಅವನಿಗೆ 'ಯೊವಾನ್ನ' ಎಂದು ನಾಮಕರಣ ಮಾಡಬೆಕು. ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹು ಜನಕ್ಕೆ ಸಂತಸವನ್ನು ತರುವುದು. ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು. ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು. ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು.  ತಂದೆ ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯ ಪ್ರಜೆಯನ್ನು ಸಿದ್ಧಗೊಳಿಸುವನು," ಎಂದನು. ಅದಕ್ಕೆ ಜಕರೀಯನು, "ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು," ಎಂದನು. ಆಗ ದೇವದೂತನು, "ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ  ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು. ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆ ಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ," ಎಂದನು. ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು. ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆ ಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು. ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು. ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. "ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ," ಎಂದುಕೊಳ್ಳುತ್ತಿದ್ದಳು.

18.12.2018

ಮೊದಲನೇ ವಾಚನ: ಯೆರೆಮೀಯ 23:5-8

ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: "ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು 'ಮೊಳಕೆ'ಯನ್ನು ಚಿಗುರಿಸುವೆನು. ಆಗ ಸತ್ಪುರುಷ: ರಾಜನಾಗಿ ಆಳುವನು. ವಿವೇಕದಿಂದ ಕಾರ್ಯಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತವಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. 'ಯೆಹೋವ ಚಿದ್ಕೇನು' (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು. " ಬರಲಿರುವ ಆ ಕಾಲದಲ್ಲಿ ಜನರು, 'ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವವಾಣಿ' ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು. ಬದಲಿಗೆ 'ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ' ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ."

ಕೀರ್ತನೆ:72:1-2, 12-13, 18-19

ಶ್ಲೋಕ : ಬೆಳೆಯಲಿ ಆತನ ಪಾಲನೆಯಲಿ ನ್ಯಾಯ ನೀತಿ ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ.

ಶುಭಸಂದೇಶ: ಮತ್ತಾಯ 1:18-25

ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭ ಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ಯೇಸು ಎಂದು ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. "ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು, 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವರು" ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. "ಇಮ್ಮಾನುವೇಲ್" ಎಂದರೆ 'ದೇವರು ನಮ್ಮೊಡನೆ ಇದ್ದಾರೆ' ಎಂದು ಅರ್ಥ. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ  'ಯೇಸು'  ಎಂದು ನಾಮಕರಣ ಮಾಡಿದನು.

17.12.2018

ಮೊದಲನೇ ವಾಚನ: ಆದಿಕಾಂಡ 49:2, 8-10

ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು, ಆಲಿಸಿ ನಿಮ್ಮ ತಂದೆ ಇಸ್ರಯೇಲಿನ ಮಾತನ್ನು: ಯೆಹೂದನೇ, ವಂದಿಸುವರು ನಿನ್ನನು ಸಹೋದರರು, ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು; ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ, ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ; ಕಾಲು ಮಡಿಚಿ ಹೊಂಚುಕೂತ ಕೇಸರಿಯಂತೆ. ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ರಾಜ್ಯಾಧಿಕಾರ ಪಡೆದವನು ಬರುವ ತನಕ; ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ; ತಪ್ಪದು ರಾಜದಂಡ ಯೆಹೂದನ ಕೈಯಿಂದ, ಕದಲದು ಮುದ್ರೆಕೋಲು ಅವನ ವಂಶದಿಂದ.

ಕೀರ್ತನೆ: 72:1-2, 3-4, 7-8, 17
ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ.

ಶುಭಸಂದೇಶ: ಮತ್ತಾಯ 1:1-17


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು ಯೂದನಿಗೆ ತಾಮರ ಎಂಬುವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್,  ಎಂಬುವಳಿಂದ ಬೋವಜ್, ಬೋವಜನಿಗೆ ರೂತ್ ಎಂಬುವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಅಸನ್ ಹುಟ್ಟಿದರು. ಅಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಳ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ "ಕ್ರಿಸ್ತ" ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಹೀಗೆ ಒಟ್ಟು, ಅಬ್ರಾಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

16.12.2018


ಮೊದಲನೇ ವಾಚನ: ಜೆಫನ್ಯನು 3:14-18

ಹರ್ಷದ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ. ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನ್ನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನ್ನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ. ಜೆರುಸಲೇಮಿಗೆ ಈ ಪರಿ ಹೇಳುವವರು ಆ ದಿನದೊಳು: "ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು." ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮದ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲ್ಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲ್ಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲ್ಲಿ ಹಬ್ಬಹುಣ್ಣಿಮೆಗಳ ತರದಲ್ಲಿ. ತಡೆದುಬಿಡುವನು ಸರ್ವವಿನಾಶವನ್ನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನ್ನು.

ಯೆಶಾಯ: 12:2-3, 4, 5-6
ಶ್ಲೋಕ: ಸಿಯೋನಿನ ನಿವಾಸಿಗಳೇ ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯಯಿರುವ ಆ ಘನವಂತನ, ಇಸ್ರಯೇಲಿನಾ ಸ್ವಾಮಿ ಪರಮ ಪಾವನ

ಎರಡನೇ ವಾಚನ: ಫಿಲಿಪ್ಪಿಯರಿಗೆ 4:4-7

ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸ ಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ. ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ. ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾ ಭಾವ ಇರಲಿ. ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.

ಶುಭಸಂದೇಶ: ಲೂಕ 3:10-18

ಆಗ ಜನಸಮೂಹವು, "ಹಾಗಾದರೆ ನಾವೇನು ಮಾಡಬೇಕು?" ಎಂದು ಕೇಳಲು, "ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ," ಎಂದು ಉತ್ತರಕೊಟ್ಟನು. ಆನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, "ಭೋಧಕರೇ, ನಾವೇನು ಮಾಡಬೇಕು?" ಎಂದು ಕೇಳಿದಾಗ, "ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ," ಎಂದನು. "ನಾವುಮಾಡಬೇಕಾದುದೇನು?" ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, "ಬಲಾತ್ಕಾರದಿಂದಾಗಲೀ, ಸುಳ್ಳು ಬೆದರಿಕೆಯಿಂದಾಗಲೀ, ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ," ಎಂದು ಆತ ಉತ್ತರವಿತ್ತನು. "ಈ ಯೊವಾನ್ನನೇ ಎಲ್ಲರು ಎದುರು ನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ" ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು. ಅದಕ್ಕೆ ಉತ್ತರವಾಗಿ ಯೊವಾನ್ನನು, "ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು. ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟು ಹಾಕುವರು," ಎಂದು ನುಡಿದನು. ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಭೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.

15.12.2018

ಮೊದಲನೇ ವಾಚನ: ಸಿರಾಖನು 48:1-4, 9-11

ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ. ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ. ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು ಎಷ್ಟು ಘನವಂತನಾಗಿದ್ದೆ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರೆಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕ ಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನ್ನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು.

ಕೀರ್ತನೆ: 80:2ac, 3b, 15-16, 18-19

ಶ್ಲೋಕ: ಸರ್ವಶಕ್ತನಾದ  ದೇವನೇ, ಉದ್ಧರಿಸೆಮ್ಮನು ಬೆಳಗಲಿ ನಿನ್ನ ಮುಖಕಾಂತಿ ಪಡೆದೆವು ರಕ್ಷಣೆಯನ್ನು.

ಶುಭಸಂದೇಶ: ಮತ್ತಾಯ 17:9, 10-13

ಅವರೆಲ್ಲರು ಬೆಟ್ಟದಿಂದ ಇಳಿದು ಬರುವಾಗ  ಯೇಸು, "ನರಪುತ್ರನು ಸತ್ತು ಪುನರುತ್ದಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಶಿಷ್ಯರು, "ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೆ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು," ಎಂದರು. ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥ ಮಾಡಿಕೊಂಡರು.

14.12.2018

ಮೊದಲನೇ ವಾಚನ: ಯೆಶಾಯ  48:17-19

ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರಸ್ವಾಮಿಯೆ ನುಡಿದಿಹನು: "ನಿನಗೆ ಕ್ಷೇಮಕರವಾದ ಮಾರ್ಗವನು ಭೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರಸ್ವಾಮಿ ದೇವರು ನಾನು. ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ. ಅಗಣಿತವಾಗಿರುತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ."

ಕೀರ್ತನೆ: 1:1-2, 3, 4, 6

ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.

ಶುಭಸಂದೇಶ: ಮತ್ತಾಯ 11:16-19


"ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? ನಾವು ಕೊಳಲನೂದಲು ನೀವು  ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ," ಎಂದು ಪೇಟೆಬೀದಿಗಳಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ 'ಇವನಿಗೆ ದೆವ್ವ ಹಿಡಿದಿದೆ' ಎಂದರು. ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಟರ ಗೆಳೆಯ ಎನ್ನುತ್ತಾರೆ. ಆದರೆದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ," ಎಂದರು.

13.12.2018

ಮೊದಲನೇ ವಾಚನ: ಯೆಶಾಯ 41:13-20


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ. ಸರ್ವೇಶ್ವರ ಇಂತೆನ್ನುತ್ತಾರೆ: "ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನಸ್ವಾಮಿಯೇ ನಿನಗೆ ವಿಮೋಚಕ. ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನ್ನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನ್ನೆ, ನೀನು ತೂರಲು ಅವುಗಳನ್ನು ಕೊಂಡೂಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲ್ಲಿ. ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ, ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೇ? ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನ್ನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನ್ನು ಬುಗ್ಗೆಗಳಾಗಿ ಮರುಭೂಮಿಯನ್ನು, ನೆಡುವೆನು ಅಡವಿಯಲ್ಲಿ ದೇವದಾರು, ಕಸ್ತೂರಿ, ಜಾಲಿ, ಸುಗಂಧ, ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಇದನ್ನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, "ಇದನ್ನು ಮಾಡಿದ ಹಸ್ತವು ಸರ್ವೇಶ್ವರಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ,"

ಕೀರ್ತನೆ: 145:1, 9, 10-11, 12-13ab

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು ಸಹನಶೀಲನು, ಪ್ರೀತಿಪೂರ್ಣನು.

ಶುಭಸಂದೇಶ: ಮತ್ತಾಯ 11:11-15

"ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಟನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಟನಾದವನು ಕೂಡ ಅವನಿಗಿಂತ ಶ್ರೇಷ್ಟನೇ ಸರಿ. ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗೂ ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ," ಎಂದರು ಯೇಸುಸ್ವಾಮಿ.