ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

30.12.2018

ಮೊದಲನೇ ವಾಚನ: 1  ಸಮುವೇಲ 1:20-22, 24- 28

ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. " ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದು" ಎಂದು ಹೇಳಿ ಆ ಮಗುವಿಗೆ 'ಸಮುವೇಲ' ಎಂದು ಹೆಸರಿಟ್ಟಳು. ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಶಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ದನಾದ. ಹನ್ನಳು, "ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ," ಎಂದು ಹೇಳಿದಳು. ಆನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನುಹಾಗೂ ಒಂದು ತಿತೀ ದ್ರಾಕ್ಷಾರಸವನ್ನೂ ತಂದಿದ್ದರು. ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು. ಹನ್ನಳು ಏಲಿಗೆ, "ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ. ಸರ್ವೇಶ್ವರನನ್ನ ಪ್ರಾರ್ಥನೆಯ ಫಲವಾಗಿ  ಅನುಗ್ರಹಿಸಿದ ಮಗನು ಇವನೇ. ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೆ ಪ್ರತಿಷ್ಠಿತನು," ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.

ಕೀರ್ತನೆ: 84:2-3, 5-6, 9-10

ಶ್ಲೋಕ: ಸ್ವಾಮಿ ಸರ್ವೇಶ್ವರಾ, ನಿನ್ನ ಮಂದಿರದಲಿ ವಾಸಿಸುವವರು ಧನ್ಯರು.

ಎರಡನೇ ವಾಚನ: 1ಯೊವಾನ್ನ 3:1-2, 21-24

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೆ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವು ಅವರಂತೆಯೇ ಇರುತ್ತೇವೆಂದು ಬಲ್ಲೆವು.  ಏಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಪ್ರಿಯರೇ, ನಮ್ಮ ಮನಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ. ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ  ಅವರಿಂದ ಪಡಿಯುತ್ತೇವೆ ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ಅವರ ಆಜ್ಞೆ. ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲಸಿರುತ್ತಾನೆ. ದೇವರು ನಮ್ಮಲ್ಲಿ ನೆಲಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.

ಶುಭಸಂದೇಶ:ಲೂಕ 2:41-52


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ  ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, "ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ," ಎಂದಳು. ಅದಕ್ಕೆ ಉತ್ತರವಾಗಿ ಯೇಸು, "ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೇ?" ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು. ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.

No comments:

Post a Comment