Sunday, October 7, 2018

08.10.2018

ಸಾಧಾರಣ ಕಾಲದ 27ನೇ ಸೋಮವಾರ

ಮೊದಲನೇ ವಾಚನ: ಗಲಾತ್ಯರಿಗೆ 1:6-12 

ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು 'ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ. ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತ ಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ. ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ! ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲು ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ. ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತಿದ್ದೇನೆ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಲು ಯತ್ನಿಸುತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ  ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ. ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ. ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.

ಕೀರ್ತನೆ: 111:1b-2, 7-8, 9 & 10c
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿಸುವುದು ಪ್ರಭುವಿಗೆ.

ಶುಭಸಂದೇಶ: ಲೂಕ 10:25-37

ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ " ಬೋಧಕರೇ, ಅಮರ ಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?" ಎಂದು ಕೇಳಿದನು. ಅದಕ್ಕೆ ಯೇಸು, "ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?" ಎಂದು ಪ್ರಶ್ನೆ ಹಾಕಿದರು. ಅವನು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು" ಎಂದಿದೆ," ಎಂದು ಉತ್ತರಕೊಟ್ಟನು. ಯೇಸು "ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರ ಜೀವ ಲಭಿಸುವುದು," ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, "ನನ್ನ ನೆರೆಯವನು ಯಾರು? ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಯೇಸು ಅವನಿಗೆ ಹೀಗೆಂದು ವಿವರಿಸಿದರು: "ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ, ಅಲ್ಲೇ ಬಿಟ್ಟುಹೋದರು.ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು,  ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣಿಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಅವನನ್ನು ತನ್ನ ಸ್ವಂತ ವಾಹಕ ಪಶುವಿನ ಮೇಲೆ  ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, 'ಇವನನ್ನು ಚೆನ್ನಾಗಿ ನೋಡಿಕೊ, ಇದಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ'   ಎಂದ. ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?" ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು , "ದಯೆ ತೋರಿದವನೇ ನೆರೆಯವನು," ಎಂದನು. ಆಗ ಯೇಸು, "ಹೋಗು, ನೀನು ಹಾಗೆಯೇ ಮಾಡು,"  ಎಂದು ಹೇಳಿದರು.

ಚಿಂತನೆ: "ಗಾಯಾಳುವಿಗೆ ಸಹಾಯ ಮಾಡುವ ಒಳ್ಳೆಯ ಉದ್ದೇಶ ಮತ್ತು ಜೊತೆಯಲ್ಲಿದ್ದ ಹಣ ಮಾತ್ರವಾಗಿದ್ದರೆ  ಸದಯ ಸಮಾರಿತನನ್ನು ಯಾರೂ ಇಂದಿಗೂ ನೆನಪಿನಲ್ಲಿ ಇಟ್ಟುಕೊಳ್ಳುತ್ತಿರಲಿಲ್ಲ". ಇಂಗ್ಲೆಂಡ್ ನ ಪ್ರಧಾನಿಯಾಗಿದ್ದ ಮಾಗರೆಟ್ ಟ್ಯಾಚರ್ ಹೇಳಿದ ಮಾತಿದು. ಇದರ ಅರ್ಥವಿಷ್ಟೇ, ಸಹಾಯ ಮಾಡಬೇಕು ಅನ್ನುವ ಆವನ ಉದ್ದೇಶ ಕಾರ್ಯರೂಪಕ್ಕೆ ಬಂದಾಗ ಮಾತ್ರ ಅದಕ್ಕೆ ಅರ್ಥ, ಇಲ್ಲವಾದರೆ ಅದು ಕೇವಲ ಒಂದು ಚಲಿಸುವ ಆಲೋಚನೆಯಷ್ಟೇ. 

07.10.2018

 ವರ್ಷದ 27ನೆಯ ಭಾನುವಾರ

ಮೊದಲನೆಯ ವಾಚನ : ಆದಿಕಾಂಡದಿಂದ ವಾಚನ      2: 18-24
“ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.”

ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರಾಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಈ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವರ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. ಅವನು ಆಕೆಯನ್ನು ನೋಡಿ ಹೀಗೆಂದನು:
‘ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು, ನನ್ನೊಡಲಿನ ಒಡಲು
ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು’.
ಈ ಕಾರಣ, ಪುರುಷರು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.
-ದೇವರ ವಾಕ್ಯವಿದು

ಕೀರ್ತನೆ                                                                                       128 : 1-2,3 4-5,6

ಶ್ಲೋಕ : ಪ್ರಭು ನಿನ್ನನ್ನು ಆಶೀರ್ವದಿಸಲಿ ಇಡೀ ಜೀವಮಾನವೆಲ್ಲ |

ಎರಡನೆಯ ವಾಚನ : ಹಿಬ್ರಿಯರಿಗೆ ಬರೆದ ಪತ್ರದಿಂದ ವಾಚನ    2 : 9-11

“ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ.”
ಸಹೋದರರೇ, ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ, ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾಮರಣವನ್ನು ಅನುಭವಿಸಿದ್ದರಿಂದ ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ ಪಡೆದುದನ್ನು ನಆವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು. ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡು ಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ. ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.
  ದೇವರ ವಾಕ್ಯವಿದು.

ಘೋಷಣೆ                                                                                     ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ !
ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ;
ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ !


ಶುಭಸಂದೇಶ : ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ   10 : 2-16

“ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ.”

ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು. ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು. ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ. ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನುತ್ತದೆ ಪವಿತ್ರಗ್ರಂಥ. ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ. ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ,” ಎಂದರು. ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು. ಮತ್ತೆ ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು. ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ. ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು. ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.
- ಪ್ರಭು ಕ್ರಿಸ್ತ ಶುಭಸಂದೇಶವಿದು.

ಚಿಂತನೆ :  ಮಹಿಳೆಯೊಬ್ಬಳು ರಬ್ಬಿಯೊಬ್ಬರ ಬಂದು ಕೇಳುತ್ತಾಳೆ “ 6 ದಿನಗಳಲ್ಲಿ ಎಲ್ಲವನ್ನು ಸೃಷ್ಟಿಸಿದ ನಿಮ್ಮ ದೇವರು ನಂತರ ಏನು ಮಾಡುತ್ತಿದ್ದಾರೆ?  ಗುರು ಉತ್ತರಿಸುತ್ತಾರೆ, “ ಅಂದಿನಿಂದ ಭೂಲೋಕದಲ್ಲಿನ ವಿವಾಹ ಬಂಧನಗಳನ್ನು ಏರ್ಪಡಿಸುತ್ತಿದ್ದಾರೆ, ಆದ ವಿವಾಹಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ”
ಮಹಿಳೆ, “ಅಷ್ಟೆಯೇ? ಇಷ್ಟು ಸುಲಭ ಕೆಲಸವನ್ನು ನಾನೂ ಮಾಡಬುಹುದಲ್ಲವೇ?”
ಅದಕ್ಕೆ ಗುರು ನುಡಿಯುತ್ತಾರೆ, “ ನಿನಗೆ ಇದು ಸುಲಭವಿರಬಹುದು , ಆದರೆ ದೇವರು ಆ ಕೆಂಪು ಸಮುದ್ರವನ್ನು ಇಬ್ಭಾಗಿಸದಷ್ಟೇ ಪ್ರೀತಿ, ಕಾಳಜಿಯಿಂದ ಈ ಕಾರ್ಯವನ್ನೂ ಮಾಡುತ್ತಿದ್ದಾರೆ, ಅವರಿಗೆ ಸ್ತುತಿ ಸಲ್ಲಲಿ”

                                                            ಜಪಮಾಲೆ ರಾಣಿಯ ಹಬ್ಬ