Saturday, November 3, 2018

04.11.2018

ಸಾಧಾರಣ ಕಾಲದ 31ನೇ ಭಾನುವಾರ

ಮೊದಲನೇ ವಾಚನ: ಧರ್ಮೋಪದೇಶಕಾಂಡ 6: 2-6

ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು ; ನಾನು ಈಗ ಭೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ. ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ ಅಭಿವೃದ್ಧಿಯಾಗುವಂತೆ,  ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿ. "ಇಸ್ರಯೇಲ್ ಜನಾಂಗವೇ ಕೇಳು: ನಿನ್ನ ದೇವರಾದ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು. ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.

ಕೀರ್ತನೆ: 18:2-3,3-4, 47-51

ಶ್ಲೋಕ: ಪ್ರಭುವೇ, ನೀನೆ ನನ್ನ ಬಲವು, ನನಗಿದೆ ನಿನ್ನಲ್ಲೇ ಒಲವು.

ಎರಡನೇ ವಾಚನ: ಹಿಬ್ರಿಯರಿಗೆ  7:23-28

ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು  ಶಾಶ್ವತವಾಗಿ ಉಳಿಯುವಂಥಾದ್ದು. ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ದಾರಮಾಡಬಲ್ಲರು, ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ  ಬೇಕಾಗಿದ್ದ ಪ್ರದಾನ ಯಾಜಕರು ಯೇಸುವೇ. ಇವರು ಪರಿಶುದ್ದರು, ನಿರ್ಧೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ  ನೇಮಿಸುವ ಪ್ರದಾನ ಯಾಜಕರು ಕುಂದು ಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸಂಪೂರ್ಪರಾದ ಪುತ್ರನನ್ನೇ ಪ್ರದಾನ ಯಾಜಕರನ್ನಾಗಿ ನೇಮಿಸುತ್ತದೆ.

ಶುಭಸಂದೇಶ: ಮಾರ್ಕ 12:28-34

ಪುನರುತ್ದಾನದ ಬಗ್ಗೆ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಆವರ ಬಳಿಗೆ ಬಂದು, "ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?" ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ  ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ, "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು ಇದೇ ಎರಡನೆಯ ಆಜ್ಞೆ, ಇವೆರಡು ಆಜ್ಞೆಗಳಿಗಿಂತ ಶ್ರೇಷ್ಟವಾದ ಆಜ್ಞೆ ಬೇರೊಂದೂ ಇಲ್ಲ" ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, ಭೋದಕರೇ, ಚೆನ್ನಾಗಿ ಹೇಳಿದಿರಿ ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನುನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು, ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು," ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ," ಎಂದರು. ಇದಾದ ಬಳಿಕ ಯೇಸುವನ್ನು  ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

03.11.2018

ಸಾಧಾರಣ ಕಾಲದ 30ನೇ ಶನಿವಾರ

ಮೊದಲನೇ ವಾಚನ: ಫಿಲಿಪ್ಪಯರಿಗೆ  1:18-26

ಸಹೋದರರೇ, ಶುಭಸಂದೇಶ ಪ್ರಚಾರಕರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ. ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ  ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ,  ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗು ನಿರೀಕ್ಷೆ. ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ, ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು. ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.  ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ. ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ. ನಿಮ್ಮಲ್ಲಿಗೆ ನಾನು ಮರಳಿ ಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.

ಕೀರ್ತನೆ ; 42:2, 3, 5
ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ.

ಶುಭಸಂದೇಶ; ಲೂಕ 14:1, 7-11

ಅಂದು ಸಬ್ಬತ್ ದಿನ ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು ಇದನ್ನು ಗಮನಿಸಿದ ಯೇಸು ಸಾಮತಿರೂಪದಲ್ಲಿ ಹೀಗೆಂದರು: "ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರದಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರ ಬಂದು, 'ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು," ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, "ಗೆಳೆಯಾ, ಮೇಲೆ ಬಾ" ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು. ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು." ಎಂದರು.