Monday, November 5, 2018

07.11.2018

ಸಾಧಾರಣ ಕಾಲದ 31ನೇ ಬುಧವಾರ 

ಮೊದಲನೇ ವಾಚನ: ಫಿಲಿಪ್ಪಿಯರಿಗೆ  2:12-18

ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ. ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸಫಲವನ್ನೂ ನೀಡುತ್ತಾರೆ. ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ. ನಿರ್ಧೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.ಹೀಗೆ ನೀವು ನಡೆದುಕೊಂಡರೆ  ನನ್ನ ಸೇವೆ ವ್ಯರ್ಥವಾಗದೆ, ಶ್ರಮ ವಿಫಲವಾಗದೆ ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆ ಪಡಬಹುದು. ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿ ಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ. ಅದೇ ರೀತಿ ನೀವು ಸಹ ನನ್ನೊಡನೆ ಸಂತೊಷದಿಂದ ಸಂಭ್ರಮಿಸುವಿರಿ.

ಕೀರ್ತನೆ: 27:1, 4, 13-14
ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ.

ಶುಭಸಂದೇಶ: ಲೂಕ 14: 25-33

ಜನರು ಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: "ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.    ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಚಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚು ವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, "ಕಟ್ಟಲಾರಂಬಿಸಿದ; ಮುಗಿಸಲು ಇವನಿಂದಾಗಲಿಲ್ಲ!" ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು.  ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.

06.11.2018

ಸಾಧಾರಣ ಕಾಲದ 31ನೇ ಮಂಗಳವಾರ 

ಮೊದಲನೇ ವಾಚನ: ಫಿಲಿಪ್ಪಿಯರಿಗೆ 2: 5-11

ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ. ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನ್ನಾತ ಹಿಡಿದಿಟ್ಟುಕೊಳ್ಳಲಿಲ್ಲ. ಬಿಡಲೊಲ್ಲೆನೆನ್ನುತ ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಜನಾಕಾರದಲ್ಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನ್ನು ಇತ್ತನು ಹೆಸರುಗಳೊಳುತ್ತಮ ಹೆಸರನ್ನು ದೇವಪರಮನು, ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. "ಕ್ರಿಸ್ತ ಯೇಸುವೇ ಪ್ರಭು" ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಕೀರ್ತನೆ: 22:26-27, 28-30, 30, 31-32
ಶ್ಲೋಕ: ಪ್ರಭೂ, ನೀನೇ ಸ್ಪೂರ್ತಿ ತುಂಬು ಸಭೆಯಲಿ ನಾ ಮಾಳ್ವ ಸ್ತುತಿಗೆ.

ಶುಭಸಂದೇಶ: ಲೂಕ  14:15-24

ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, "ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!" ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: "ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ, ಊಟಕ್ಕೆ ವೇಳೆಯಾದಾಗ, "ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ," ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು "ಕ್ಷಮಿಸಬೇಕು," ಎಂದು ಹೇಳಲಾರಂಭಿಸಿದರು. ಒಬ್ಬನು, "ಕ್ಷಮಿಸಬೇಕು,  ಒಂದು ಹೊಲ ಕೊಂಡುಕೊಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ," ಎಂದ. ಇನ್ನೊಬ್ಬ, "ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು  ಹೋಗುತಿದ್ದೇನೆ. ನನ್ನನ್ನು ಕ್ಷಮಿಸಬೇಕು," ಎಂದ. ಮತ್ತೊಬ್ಬ, "ನನಗೆ ಈಗ ತಾನೇ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ," ಎಂದನು. "ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, "ಪಟ್ಟಣದ ಹಾದಿಬೀದಿಗಳಿಗೂ ಸಂದಿಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು,  ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ," ಎಂದು ಆಜ್ಞೆಮಾಡಿದ. ಸೇವಕನು ಬಂದು, "ಸ್ವಾಮಿ ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ," ಎಂದು ಹೇಳಿದ. ಅದಕ್ಕೆ ಯಜಮಾನ "ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲಾ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!" ಎಂದು ಸ್ಪಷ್ಟಪಡಿಸಿದ.