ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-8
ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡಿದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರ ಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೊದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೊಗಿದ್ದರೂ ಬಹು ಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.
ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ
ಶುಭಸಂದೇಶ: ಯೊವಾನ್ನ 14:6-14
ಅದಕ್ಕೆ ಯೇಸು, "ಮಾರ್ಗವೂ ಸತ್ಯವೂ ಜೀವವೂ ನಾನೇ.ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದೀರಿ ಹಾಗೂ ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೆ ಸಾಕು," ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. "ನಾನು ಪಿತನಲ್ಲಿ ಇದ್ದೇನೆ ಪಿತನು ನನ್ನಲ್ಲಿ ಇದ್ದಾರೆ," ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ. ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ; ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು."
ಮನಸಿಗೊಂದಿಷ್ಟು : ಯೇಸುವಿನ ನಂತರ ಶಿಷ್ಯರು ಶುಭ ಸಂದೇಶದ ಪ್ರಚಾರದಲ್ಲಿ ಮಾಡಿದ ಸಾಧನೆ ಅಪಾರ. ’ ನನ್ನಲ್ಲಿ ವಿಶ್ವಾಸವುಳ್ಳವನು ಮಹತ್ತಾದುವುಗಳನ್ನು ಸಾಧಿಸುವನು’ ಎಂಬ ಯೇಸುವಿನ ಮಾತು ಶಿಷ್ಯರ ಹಾಗೂ ಅನೇಕ ಸಂತರ ಬಾಳಿನಲ್ಲಿ ನಿಜವಾದುದ್ದನ್ನು ನಾವು ಕಾಣುತ್ತೇವೆ. ಆ ಮಾತು ನಮ್ಮ ಮೂಲಕವೂ ಸಾಕರಾಗೊಳ್ಳಲೆಂಬ ಆಸೆ ನಮ್ಮದಾಗಲಿ.
ಪ್ರಶ್ನೆ : ಮಹತ್ತಾದುವುಗಳನ್ನು ಸಾಧಿಸಲು ಬೇಕಾದ ವಿಶ್ವಾಸ ನಮ್ಮಲ್ಲಿದೆಯೇ?
No comments:
Post a Comment