ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

04.05.2019 - "ಅಂಜಬೇಡಿ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:1-7

ಇತ್ತ ಭಕ್ತ ವಿಶ್ವಾಸಿಗಳ ಸಂಖೆ ಹೆಚ್ಚುತ್ತಾ ಬಂದಿತು. ಆಗ ಗ್ರಿಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳಿಯ ಭಾಷೆ ಮಾತನಾಡುತ್ತಿದ್ದವರ ನಡುವೆ ಭಿನ್ನಭಿಪ್ರಾಯ ಉಂಟಾಯಿತು.‌ ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯ ಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. ಆಗ ಹನ್ನೆರಡು ಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, "ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. ಆದುದರಿಂದ ಸಹೋದರರೇ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗೀರುವ ಏಳು ವೆಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ. ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ. ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,"  ಎಂದರು. ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸವುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳು ಮಂದಿಯನ್ನು ಆರಿಸಿಕೊಂಡರು. ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು. ದೇವರ ವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಕೀರ್ತನೆ: 33:1-2, 4-5, 18-19

ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ

ಶುಭಸಂದೇಶ: ಯೊವಾನ್ನ 6:16-21


"ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು." ಸಾಯಂಕಾಲವಾದ ಮೇಲೆ ಯೇಸುಸ್ವಾಮಿಯ ಶಿಷ್ಯರು ಸರೋವರಕ್ಕೆ ಹೋಗಿ ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಅಷ್ಟರಲ್ಲಿ ರಭಸದಿಂದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು. ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು. ಆಗ ಯೇಸು, "ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ," ಎಂದು ಹೇಳಿದರು. ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ, ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.

ಮನಸಿಗೊಂದಿಷ್ಟು : ನಮ್ಮ ಜೀವನದ ಅಲ್ಲೋಲಕಲ್ಲೋಲದ ಸಮಯದಲ್ಲಿ ಯೇಸು ಸ್ವಾಮಿಯ ಇರುವಿಕೆಯ ಬಗೆಗಿನ ನಮ್ಮ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಯೋಚಿಸುವಂತೆ ಮಾಡುತ್ತದೆ ಇಂದಿನ ಶುಭಸಂದೇಶ. ರಭಸದ ಗಾಳಿಯ ಸಮಯದಲ್ಲಿ ಯೇಸು ದೋಣಿಯ ಬಳಿ ಬರುತ್ತಿರುವುದು ಶಿಷ್ಯರಿಗೆ ಸಮಾಧಾನ ತರಬೇಕಿತ್ತು, ಆದರೆ ಅವರು ಭಯಪಟ್ಟರು. ’ಅಂಜಬೇಡಿ’ ಎಂಬ ಮಾತಿನ ನಂತರವೇ ಅವರು ಯೇಸುವನ್ನು ಬರಮಾಡಿಕೊಂಡದ್ದು, ದಡ ಸೇರಿದ್ದು. ’ಅಂಜಬೇಡಿ’ ಎಂಬ ಮಾತಿಗೆ ನಾವು ಕಾಯದಿರೋಣ, ಯೇಸುವಿನ ಸಾಮಿಪ್ಯವಿದ್ದರೆ ಸಾಕು ನಮ್ಮ ದಡ ಹತ್ತಿರ, ಹಗುರ ಸುಗಮ. 

ಪ್ರಶ್ನೆ : ನಮ್ಮ ಬಾಳ ಪಯಣದಲ್ಲಿ ಕ್ರಿಸ್ತನ ಹೆಜ್ಜೆಗಳಿಗೆ ನಾವೆಷ್ಟು ಹತ್ತಿರ?

No comments:

Post a Comment