ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 8:1-8
ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ದ ಕ್ರೂರ ಹಿಂಸೆ, ಪ್ರಾರಂಭವಾಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದುರಿ ಹೋದರು. ಕೆಲವು ಭಕ್ತಾದಿಗಳು ಸ್ತೇಫನನ್ನು ಸಮಾಧಿ ಮಾಡಿ ಅವನಿಗಾಗಿ ಗೋಳಾಡಿದರು. ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆ ಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು. ಚದುರಿ ಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು. ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣವೂಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತರಾದ ಲೋಕೋದ್ಧಾರಕನೆಂದು. ಸಾರಿದನು. ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಬುತ ಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು. ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು. ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.
ಕೀರ್ತನೆ: 66:1-3, 4-5, 6-7
ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರವ ದೇವನಿಗೆ
ಶುಭಸಂದೇಶ: ಯೊವಾನ್ನ 6:35-40
ಆಗ ಯೇಸು, "ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ. ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ. ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಚೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ. ಅವರ ಚಿತ್ತವೆನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು. ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ," ಎಂದು ನುಡಿದರು.
ಮನಸಿಗೊಂದಿಷ್ಟು : ಯೇಸುವಿಲ್ಲದೆಯೂ ನಾವು ಅಸ್ತಿತ್ವದಲ್ಲಿರಲು ಸಾಧ್ಯ, ಆದರೆ ಆ ಅಸ್ತಿತ್ವದ ಹಿಂದಿನ ಜೀವಂತಿಕೆ ಯೇಸುವೇ. ಈ ಜೀವಂತಿಕೆ ಈ ಲೋಕದ ಬದುಕು ಮೀರಿದ ಮೇಲೂ ಇರಲು ಸಾಧ್ಯವಾಗುವುದು ಯೇಸುವಿನ ಮೇಲಿನ ವಿಶ್ವಾಸದಿಂದಲೇ. ತಮ್ಮಲ್ಲಿ ವಿಶ್ವಾಸವಿಡಲು ನಮಗೆ ಕರೆ ನೀಡುತ್ತಿರುವ ಯೇಸುವಿನತ್ತ ನಾವು ಸಾಗದಿದ್ದರೆ ನಮಗೆ ನಾವೇ ಮೋಸ ಮಾಡಿಕೊಂಡಂತೆ, ನಿತ್ಯ ಜೀವದ ಭಾಗ್ಯವನ್ನು ಕೈ ಚೆಲ್ಲಿದಂತೆ.
ಪ್ರಶ್ನೆ : ನಮ್ಮದು ಯಾವ ರೀತಿಯ ಹಸಿವು, ದಾಹ?
No comments:
Post a Comment