ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:13--25
ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು. ಉಳಿದವರು ಪೆರ್ಗದಿಃದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು. ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, "ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ," ಎಂದು ಕೇಳಿಕೊಂಡರು. ಆಗ ಪೌಲನು ಎದ್ದುನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: "ಇಸ್ರಯೇಲ್ ಬಾಂಧವರೇ, ಹಾಗು ನಿಜ ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ: ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು. ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು. ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ಥ್ಯವಾಗಿ ಕೊಟ್ಟರು ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಆನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ನಾಯಾಧಿಪತಿಗಳನ್ನು ಕಳುಹಿಸಿದರು. ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಲ್ವತ್ತು ವರ್ಷ ಆಳಿದನು. ಆನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, 'ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,' ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ದಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದನು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, "ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಆನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ," ಎಂದನು.
ಕೀರ್ತನೆ: 89:2--3, 21--22, 25, 27
ಶ್ಲೋಕ: ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು
ಶುಭಸಂದೇಶ: ಯೊವಾನ್ನ 13:16-20
ತಮ್ಮ ಶಿಷ್ಯರ ಪಾದಗಳನ್ನು ತೊಳೆದ ನಂತರ ಯೇಸು ಹೀಗೆಂದರು. "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸಲಾದವನಿಗಿಂತ ಶ್ರೇಷ್ಠನಲ್ಲ. ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು! ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ 'ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು' ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ. ಅದು ಈಡೇರುವಾಗ "ಇರುವಾತನು ನಾನೇ" ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ. ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ."
No comments:
Post a Comment