18.05.2019 - "ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:44-52

ಮುಂದಿನ ಸಬ್ಬತ್ ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಪೌಲ ಮತ್ತು ಬಾರ್ನಬ ಮತ್ತಷ್ಟು ಧ್ಯೆರ್ಯದಿಂದ ಮಾತನಾಡಿದರು: "ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: 'ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೊದ್ಧಾರದ ಸಾಧನವಾಗಿಯೂ ನಾನು ನಿಮ್ಮನ್ನು ನೇಮಿಸಿದ್ದೇನೆ', ಇದನ್ನು ಕೇಳಿ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು. ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು. ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿಸಿದರು. ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು. ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.

ಕೀರ್ತನೆ: 98:1, 2-3, 3-4
ಶ್ಲೋಕ: ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ, ನಮ್ಮ ದೇವ ಸಾಧಿಸಿದ ಜಯಗಳಿಕೆ

ಶುಭಸಂದೇಶ: ಯೊವಾನ್ನ 14:7-14

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, "ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ. ಹಾಗೂ ಕಂಡೂ ಇದ್ದೀರಿ," ಎಂದು ನುಡಿದರು. ಆಗ ಫಿಲಿಪ್ಪನು, "ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು," ಎಂದನು. ಅದಕ್ಕೆ ಉತ್ತರವಾಗಿ ಯೇಸು, "ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, "ನಮಗೆ ಪಿತನನ್ನು ತೋರಿಸಿ" ಎಂದು ಹೇಗೆ ಹೇಳುತ್ತಿ? ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ  ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯಗಳನ್ನು ಸಾಧಿಸುತ್ತಾರೆ. "ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ," ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ.  ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು," ಎಂದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...