ಮೊದಲನೇ ವಾಚನ: ಆದಿಕಾಂಡ 18:16-33
ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗ ಕಳುಹಿಸುತ್ತಾ ಅಬ್ರಾಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು. ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: "ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಾಹಾಮನಿಂದ ಮರೆಮಾಡುವುದು ಸರಿಯಲ್ಲ. ಅವನಿಂದ ಮಹಾ ಬಲಿಷ್ಟವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ. ಅವನು ತನ್ನ ಪುತ್ರ ಪೌತ್ರರಿಗೆ, "ನೀವು ನ್ಯಾಯ ನೀತಿಯನ್ನು ಪಾಲಿಸುತ್ತಾ ಸರ್ವೇಶ್ವರಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು," ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ," ಇದಲ್ಲದೆ ಸರ್ವೇಶ್ವರ, "ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪ ಕೃತ್ಯವೂ ಘೋರವಾದುದು. ನನಗೆ ಮುಟ್ಟಿರುವ ದೂರಂತೆ ಅವರು ಮಾಡಿರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ. ಎಂದುಕೊಂಡರು. ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೊರಟರು. ಆದರೆ ಅಬ್ರಾಹಾಮನು ಸರ್ವೇಶ್ವರಸ್ವಾಮಿಯ ಸಂಗಡವೇ ಉಳಿದುಕೊಂಡನು. ಅವನು ಅವರ ಹತ್ತಿರಕ್ಕೆ ಬಂದು, "ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶ ಮಾಡುವಿರೋ? ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಉಳಿಸದೆ ನಾಶಮಾಡುವಿರೋ? ಹೀಗೆ ದುಷ್ಟರಿಗೂ ಸಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೆ?" ಎಂದನು. ಅದಕ್ಕೆ ಸರ್ವೇಶ್ವರ, "ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ," ಎಂದರು. ಆಗ ಅಬ್ರಾಹಾಮನು " ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ. ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು, ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶ ಮಾಡುವಿರೋ?" ಎಂದು ಕೇಳಲು ಸರ್ವೇಶ್ವರ, "ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ" ಎಂದರು. ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು. "ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?" ಎಂದು ವಿಚಾರಿಸಿದನು. "ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿ ಹೋಗುತ್ತಿದ್ದೇನೆ," ಎಂದು ಉತ್ತರಕೊಟ್ಟಳು. ಅದಕ್ಕೆ ಆ ದೂತನು, "ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ," ಎಂದು ತಿಳಿಸಿದನು. ಅದೂ ಅಲ್ಲದೆ ಸ್ವಾಮಿಯ ದೂತನು, "ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು," ಎಂದು ಹೇಳಿ ಹಿಂತೆಂದನು: ಹುಟ್ಟುವನು ಮಗನೊಬ್ಬನು ಗರ್ಭಣಿಯಾದ ನಿನಗೆ, ಇಷ್ಮಾಯೇಲೆಂಬ ಹೆಸರನಿಡು ಅವನಿಗೆ ಕಾರಣ ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ. ಬಾಳೂವನವನು ಕಾಡುಗತ್ತೆಯಂತೆ, ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರುಬದುರಾಗಿ." ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.
ಕೀರ್ತನೆ: 103:1-2, 3-4, 8-9, 10-11
ಶ್ಲೋಕ: ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು
ಶುಭಸಂದೇಶ: ಮತ್ತಾಯ 8:18-22
ದೊಡ್ಡ ಜನಸಮೂಹ ತಮ್ಮ ಸುತ್ತಲು ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆ ಮಾಡಿದರು. ಆಗ ಒಬ್ಬ ದರ್ಮಶಾಸ್ತ್ರಿ ಬಂದು, "ಗುರುವೇ , ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ," ಎಂದನು. ಅದಕ್ಕೆ ಯೆಸು, " "ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ," ಎಂದರು. ಶಿಷ್ಯರಲ್ಲಿ ಮತ್ತೊಬ್ಬನು ಮುಂದೆ ಬಂದು, "ಸ್ವಾಮೀ, , ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸಲು ಸಮಯ ಕೊಡಿ," ಎಂದು ಕೇಳಿದನು. ಅವನಿಗೆ ಯೇಸು, "ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲು; ನೀನು ನನ್ನನ್ನು ಹಿಂಬಾಲಿಸು," ಎಂದರು
No comments:
Post a Comment