ಪ್ರಭುವಿನ ಸ್ವರ್ಗಾರೋಹಣದ ಹಬ್ಬ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11
ಕೀರ್ತನೆ: 47:2--3, 6--7, 8--9
ಶ್ಲೋಕ: ಏರಿದನು ಪ್ರಭು ಜಯಜಯಕಾರದೊಂದಿಗೆ ಆರೋಹಣವಾದನು ತುತೂರಿನಾದದ ಜೊತೆಗೆ
ಎರಡನೇ ವಾಚನ: ಎಫೆಸಿಯರಿಗೆ 1:17--23
ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ: ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣಿಸುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಲಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿದದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣವುಳ್ಳದ್ದಾಗಿದೆ.
ಶುಭಸಂದೇಶ: ಲೂಕ 24:46--53
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ದಾನ ಹೊಂದಬೇಕಾಗಿತ್ತು: ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ , ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು. ಇದಕ್ಕೆಲ್ಲಾ ನೀವೇ ಸಾಕ್ಷಿಗಳು. ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ," ಎಂದು ಹೇಳಿದರು. ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು. ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು. ಶಿಷ್ಯರು ಅವರನ್ನು ಆರಾಧಿಸಿ ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು. ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿ ಮಾಡಿಕೊಂಡಿದ್ದರು.
No comments:
Post a Comment