ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:1-11
ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು. ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ಧನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮ-ಭರಿತರಾದರು. ಆ ಆತ್ಮ ಪ್ರೇರಣೆಯಿಂದ ಬೇರೆ ಬೇರೆ ಬಾಷೆಗಳಲ್ಲಿ ಮಾತನಾಡ-ತೊಡಗಿದರು. ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದ್ದರು. ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. ಅವರೆಲ್ಲರೂ ವಿಸ್ಮಿತರಗಿ, "ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ? ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ, ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್ ನಿಂದ ಬಂದಿದ್ದಾರೆ. ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!" ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.
ಕೀರ್ತನೆ: 104:1, 24, 29-30, 31, 34
ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುವು ಪುನಶ್ಚೇತನಗೊಳ್ಳುವುದು ಜಗವೆಲ್ಲವು
ಎರಡನೇ ವಾಚನ: 1 ಕೊರಿಂಥಿಯರಿಗೆ 12:3-7, 12-13
ಶುಭಸಂದೇಶ: ಯೊವಾನ್ನ 20:19-23
ಅದೇ ಬಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. "ನಿಮಗೆ ಶಾಂತಿ" ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪನಃ, ",ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ, ಎಂದರು. ಅನಂತರ ಅವರ ಮೇಲೆ ಉಸಿರೂದಿ, "ಪವಿತ್ರಾತ್ಮರನ್ನು ಸ್ವೀಕರಿಸಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅದನ್ನು ಕ್ಷಮಿಸಲಾಗುವುದು, ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು," ಎಂದು ನುಡಿದರು.
No comments:
Post a Comment