ಮೊದಲನೇ ವಾಚನ: 2 ಕೊರಿಂಥಿಯರಿಗೆ 5:14-21
ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು. ಸರ್ವರಿಗೂ ಯೇಸು ಪ್ರಾಣ ತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ದಾನರಾದ ಯೇಸುವಿಗಾಗಿ ಜೀವಿಸಬೇಕು. ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ. ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದು ಹೋಗುತ್ತದೆ. ಹೊಸದಿದೋ , ಜನ್ಮ ತಳೆದಿದೆ. ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನ ಪಡಿಸಿಕೊಂಡಿದ್ದಾರೆ. ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ. ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂದವನ್ನು ಪಡೆಯಲೆಂದೇ ಹೀಗೆ ಮಾಡಿದರು.
ಕೀರ್ತನೆ: 103:1--2, 3--4, 9--10, 11-12
ಶ್ಲೋಕ: ಭಜಿಸು ನನ್ನ ಮನವೇ, ಭಜಿಸು ಪ್ರಭುವನು
ಶುಭಸಂದೇಶ: ಮತ್ತಾಯ 5:33--37
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇ ಬೇಕು" ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ; ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.
ಮನಸಿಗೊಂದಿಷ್ಟು : "ಕ್ರೈಸ್ತರು ಅದೆಂತಹ ಪ್ರಾಮಾಣಿಕ ಜೀವನವನ್ನು ನಡೆಸಬೇಕೆಂದರೆ, ಯಾರು ಅವರನ್ನು ಆಣೆ ಮಾಡಲು ಕೇಳಲಾಗದಷ್ಟು" ಎನ್ನುತ್ತಾರೆ ಬೈಬಲ್ ಪಂಡಿತರಾದ ಅಲೆಕ್ಸಾಂಡ್ರಿಯಾದ ಕ್ಲೆಮಂಟ್. ಪಾರದರ್ಶಕವಾದ ಹಾಗೂ ಸತ್ಯತೆಯ ಜೀವನ ನಮ್ಮದಾದಾಗ ನಮ್ಮಲ್ಲಿ ಈ ಲೋಕ ವಿಶ್ವಾಸವಿಡುವಾಗ ಆಣೆಯ ಅವಶ್ಯಕತೆ ಇರುವುದಿಲ್ಲ. ವ್ಯಕ್ತಿಯಿಂದ ವ್ಯಕ್ತಿ ಹಾಗೂ ಇಡೀ ವಿಶ್ವವೇ ಸತ್ಯತೆಯಲ್ಲಿ ಬಾಳುವ ಸುಂದರ ಪರಿಕಲ್ಪನೆ ಇದು
ಪ್ರಶ್ನೆ : ನಮ್ಮ ಬದುಕೆಷ್ಟು ಪಾರದರ್ಶಕ?
No comments:
Post a Comment