ಮೊದಲನೇ ವಾಚನ: ಆದಿಕಾಂಡ - 41:55-57, 42:5-7, 17-24
ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, "ಹೋಗಿ ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ," ಎಂದು ಉತ್ತರಕೊಟ್ಟನು. ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು. ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು. ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು. ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ, ಇಂತಿರಲು ಅವನ ಅಣ್ಣಂದಿರು ಬಂದು ಅವನ ಮಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು. ಜೋಸೆಫನು ಅವರನ್ನು ನೋಡಿದ ಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುನುಡಿಯಿಂದ, "ನೀವು ಎಲ್ಲಿಯವರು?" ಎಂದು ಕೇಳಿದನು. ಅವರು, "ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು," ಎಂದು ಹೇಳಿದರು. ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಿನಲ್ಲಿ ಇರಿಸಿದನು. ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, "ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆಯಿದ್ದರೆ ನಾನು ಹೇಳಿದಂತೆ ಮಾಡಿ; ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯಗಳನ್ನು ತೆಗೆದುಕೊಂಡು ಹೋಗಿ. ಆದರೆ, ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ. ಆಗ ನೀವು ಸಾಯದೆ ಉಳಿಯುವಿರಿ," ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು. ಆಗ ಅವರು ತಮ್ಮತಮ್ಮೊಳಗೆ, "ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿಯಂದ ಬೇಡಿಕೊಂಡ. ಅವನ ಪ್ರಾಣ ಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ," ಎಂದು ಮಾತನಾಡಿಕೊಂಡರು. ಅಂತೆಯೇ ರೂಬೇನನು, "ಆ ಹುಡುಗನಿಗೆ ಯಾವ ಕೇಡನ್ನು ಮಾಡಬೇಡಿ" ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆ ಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ," ಎಂದ. ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತನಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನಸಲಿಲ್ಲ. ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರಿಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಬೇಡಿಹಾಕಿಸಿದ.
ಕೀರ್ತನೆ: 33:2-3, 10-11, 18-10
ಶ್ಲೋಕ: ನಮ್ಮ ಮೇಲಿರಲಿ ಪ್ರಭು ನಿನ್ನಚಲ ಪ್ರೀತಿ
ಶುಭಸಂದೇಶ: ಮತ್ತಾಯ 10:1-7
ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು: ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಆಂದ್ರೇಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಆಲ್ಫಾಯನ ಮಗ ಯಕೋಬ ಮತ್ತು ತದ್ಧಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡು ಮಂದಿ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇ ಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, "ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ" ಎಂದು ಬೋಧನೆಮಾಡಿರಿ.
No comments:
Post a Comment