ಮೊದಲನೇ ವಾಚನ: ಆದಿಕಾಂಡ 49:29-33; 50:15-25
ಯಕೋಬನು ತನ್ನ ಮಗಳಿಗೆ ಕೊಟ್ಟ ಆಜ್ಞೆ ಇದು; "ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿ ಮಾಡಬೇಕು. ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಬೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು. ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿಯಾಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಹೊಲದ ಸಮೇತ ಹಿತ್ತಿಯರಿಂದ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ," ಎಂದನು. ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಮೃತರಾದ ಪಿತೃಗಳ ಬಳಿಗೆ ಸೇರಿದನು. ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, "ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು," ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು; ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ "ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾದವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು." ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾದವನ್ನು ಈಗ ನೀನು ಕ್ಷಮಿಸಬೇಕೆಂದು," ಬೇಡಿಕೊಳ್ಳುತ್ತಿದ್ದೇವೆ." ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು. ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. "ಇಗೋನಾವು ನಿನಗೆ ಗುಲಾಮರು," ಎಂದು ಹೇಳಿದರು. ಆದರೆ ಜೋಸೆಫನು ಅವರಿಗೆ, "ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ; ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದಿರಿ. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ. ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ," ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು. ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು; ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಿಲಿಗೆ ಬರಮಾಡಿಕೊಂಡನು. ಜೋಸೆಫನು ತನ್ನ ಅಣ್ಣ ತಮ್ಮಂದಿರಿಗೆ, "ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು," ಎಂದು ಹೇಳಿದನು. ಇದೂ ಅಲ್ಲದೆ ಜೋಸೆಫನು ಇ ಇಸ್ರಯೇಲನ ಮಕ್ಕಳಿಗೆ, "ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾದಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು," ಎಂದು ಹೇಳಿ, "ಹಾಗೆಯೇ ಮಾಡುತ್ತೇವೆ," ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.
ಕೀರ್ತನೆ: 105:1-2, 3-4, 5-7
ಶ್ಲೋಕ: ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು
ಶುಭಸಂದೇಶ: ಮತ್ತಾಯ 10:24-33
ಯೇಸುಸ್ವಾಮಿ ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ "ಬೆಲ್ಜಬೂಲ್" ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು? ಜನರಿಗೆ ಭಯಪಡಬೇಡಿ ಮುಚ್ಚುಮರೆ ಆಗಿರುವುದೆಲ್ಲ ಬಟ್ಟ ಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ. ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲ್ಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.
No comments:
Post a Comment