ಮೊದಲನೇ ವಾಚನ ಆದಿಕಾಂಡ 18:1-10
ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರಸ್ವಾಮಿಯ ದರ್ಶನವಾಯಿತು. ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ, "ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯ ಮಾಡದೆ ಮುಂದೆ ಹೋಗಬೇಡಿ. ನೀರು ತರಿಸಿಕೊಡುತ್ತೇನೆ, ಕಾಲು ತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ. ಸ್ವಲ್ಪ ಆಹಾರ ತರುತ್ತೇನೆ. ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತಿದ್ದೀರಲ್ಲವೆ?" ಎನ್ನಲು ಅವರು "ನೀನು ಹೇಳಿದಂತೆಯೇ ಆಗಲಿ," ಎಂದರು. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಾಳ ಬಳಿಗೆ ಓಡಿ ಆಕೆಗೆ, "ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು," ಎಂದನು. ಆನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ್ದ ಎಳೆ ಕರುವನ್ನು ತೆಗೆದು ಅವನ ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗೂ ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಬಳಿಕ, "ನಿನ್ನ ಹೆಂಡತಿ ಸಾರಾಳು ಎಲ್ಲಿ?" ಎಂದು ಆ ಅತಿಥಿಗಳು ವಿಚಾರಿಸಿದಾಗ, "ಅಲ್ಲಿ ಗುಡಾರದಲ್ಲಿದ್ದಾಳೆ," ಎಂದು ಉತ್ತರಕೊಟ್ಟನು. ಆಗ ಸರ್ವೇಶ್ವರಸ್ವಾಮಿ, "ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಾಳಿಗೆ ಮಗನಿರುತ್ತಾನೆ," ಎಂದರು.
ಕೀರ್ತನೆ: 15:2-3, 3-4, 5
ಶ್ಲೋಕ: ಯೋಗ್ಯನಾರು ಪ್ರಭೂ, ನಿನ್ನ ಗುಡಾರದಲ್ಲಿ ಬಿಡಾರ ಮಾಡಲು?
ಎರಡನೇ ವಾಚನ: ಕೊಲೊಸ್ಸೆಯರಿಗೆ 1:24-28
ಸಹೋದರರೇ, ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತ ಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದುದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ. ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಯುಗ ಯುಗಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ. ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ, ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ಪರಿಣತರನ್ನಾಗಿ ಊರ್ಜಿತಗೊಳ್ಳಿಸಲು ಪ್ರಯತ್ನಿಸುತ್ತಿದ್ದೇವೆ.
ಶುಭಸಂದೇಶ: ಲೂಕ 10:38-41
ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಆಕೆ ಪ್ರಭುವಿನ ಸನ್ನಿಧಿಯಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿ ಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, "ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯಮಾಡುವಂತೆ ಅವಳಿಗೆ ಹೇಳಿ," ಎಂದಳು. ಯೇಸು ಆಕೆಗೆ ಪ್ರತ್ಯುತ್ತರವಾಗಿ, "ಮಾರ್ತ, ಮಾರ್ತ, ನೀನು ಅನಾವಶ್ಯ ಚಿಂತೆ ಪೇಚಾಟಿಕೆಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ, ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು," ಎಂದರು.
No comments:
Post a Comment