ಮೊದಲನೇ ವಾಚನ: ಪರಮಗೀತೆ 3:1-4
ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ, ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದ "ನನ್ನ ಪ್ರಾಣಕಾಂತನನ್ನು ಕಂಡಿರಾ?" ಎಂದು ವಿಚಾರಿಸಿದೆ; ಅವರನ್ನು ಬಿಟ್ಟು ತುಸು ಹೊತ್ತಿನಲ್ಲೇ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯಿಯ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.
ಕೀರ್ತನೆ: 63:2, 3-4, 5-6, 8-9
ಶ್ಲೋಕ: ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ
ಶುಭಸಂದೇಶ: ಯೊವಾನ್ನ 20:1-2, 11-18
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.
No comments:
Post a Comment