ಮೊದಲನೇ ವಾಚನ: ಆದಿಕಾಂಡ 18:20-32
"ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪ ಕೃತ್ಯವೂ ಘೋರವಾದುದು. ನನಗೆ ಮುಟ್ಟಿರುವ ದೂರುಗಳಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ," ಎಂದುಕೊಂಡರು ಸರ್ವೇಶ್ವರ. ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು. ಅವನು ಅವರ ಹತ್ತಿರಕ್ಕೆ ಬಂದು, "ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶ ಮಾಡುವಿರೋ? ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯ ತೀರಿಸಬೇಕಲ್ಲವೆ?" ಎಂದನು. ಅದಕ್ಕೆ ಸರ್ವೇಶ್ವರ, "ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ," ಎಂದರು. ಆಗ ಅಬ್ರಹಾಮನು "ನಾನಂತು ಮಣ್ಣು ಬೂದಿ. ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ. ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶ ಮಾಡುವಿರೋ?" ಎಂದು ಕೇಳಲು ಸರ್ವೇಶ್ವರ, "ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ" ಎಂದರು. ಅಬ್ರಹಾಮನು ಇನ್ನೂ ಮುಂದುವರೆದು, "ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು" ಎನ್ನಲು "ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ" ಎಂದರು. ಅಬ್ರಹಾಮನು, "ಸ್ವಾಮೀ, ಕೋಪ ಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು" ಎನ್ನಲು ಸರ್ವೇಶ್ವರ, "ಅಲ್ಲಿ ಮೂವತ್ತು ಮಂದಿ ಸಿಕ್ಕರೂ ಅದನ್ನು ನಾಶ ಮಾಡುವುದಿಲ್ಲ," ಎಂದರು. ಅವನು ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು," ಎನ್ನಲು, ಸರ್ವೇಶ್ವರ, "ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶ ಮಾಡುವುದಿಲ್ಲ," ಎಂದರು. ಅಬ್ರಹಾಮನು, "ಸ್ವಾಮೀ ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು" ಎನ್ನಲು, ಸರ್ವೇಶ್ವರ, "ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶ ಮಾಡುವುದಿಲ್ಲ," ಎಂದರು.
ಕೀರ್ತನೆ: 138:1-2, 2-3, 6-7, 7-8
ಶ್ಲೋಕ: ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು
ಎರಡನೇ ವಾಚನ: ಕೊಲೊಸ್ಸೆಯರಿಗೆ 2:12-14
ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತ ಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು. ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದಿರಿ. ಆದರೆ ಈಗ ದೇವರು ಕ್ರಿಸ್ತ ಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ. ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿದಿ ನಿಯಮಗಳನ್ನು ಕ್ರಿಸ್ತಯೇಸು ತೊಡೆದು ಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.
ಶುಭಸಂದೇಶ: ಲೂಕ 11:1-13
ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು, "ಪ್ರಭುವೇ ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ," ಎಂದನು. ಅದಕ್ಕೆ ಯೇಸು ಇಂತೆಂದರು, "ನೀವು ಹೀಗೆ ಪ್ರಾರ್ಥನೆ ಮಾಡಬೇಕು: "ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ. ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ. ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ.ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ," ಪುನಃ ಯೇಸುಸ್ವಾಮಿ ಶಿಷ್ಯರಿಗೆ, "ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, "ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗ ತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ." ಎಂದು ಕೇಳಲು, ಈ ಸ್ನೇಹಿತ ಒಳಗಿನಂದಲೇ, "ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ," ಎಂದು ಉತ್ತರ ಕೊಡುವುದು ಸಹಜವಲ್ಲವೇ? ಆದರೂ, ತನ್ನ ಗೆಳೆಯ ಇವನು ಎಂದು ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಆದುದರಿಂದ: "ಕೇಳಿರಿ, ನಿಮಗೆ ದೊರಕುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು."ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ," ಎಂದರು.
No comments:
Post a Comment