ಮೊದಲನೇ ವಾಚನ: ವಿಮೋಚನಾಕಾಂಡ: 34:29-35
ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ. ಮೋಶೆಯ ಮುಖ ಹೀಗೆ ಪ್ರಕಾಶಮಯವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು. ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನ ನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು. ಆನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು. ಅವರೊಡನೆ ಮಾತಾಡಿ ಮುಗಿಸಿದ ಮೇಲೆ ಮೋಶೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು ಮೋಶೆಯ ಮುಖ ಪ್ರಕಾಶಮಯವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತನಾಡಲು ಹೋಗುವವರೆಗೆ ತನ್ನ ಮಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.
ಕೀರ್ತನೆ: 99:5, 6, 7, 9
ಶ್ಲೋಕ: ಪರಮ ಪವಿತ್ರನು ಆ ನಮ್ಮ ದೇವರು
ಶುಭಸಂದೇಶ: ಮತ್ತಾಯ 13:44-46
ಯೇಸು ತಮ್ಮ ಶಿಷ್ಯರೊಂದಿಗೆ, "ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಬಿಡುತ್ತಾನೆ. ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ," ಎಂದರು.
No comments:
Post a Comment