ಮೊದಲನೇ ವಾಚನ: ನ್ಯಾಯಸ್ಥಾಪಕರು 6:11-24
ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು. ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, "ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ" ಎಂದನು. ಆಗ ಗಿದ್ಯೋನನು ಅವನಿಗೆ, "ಸ್ವಾಮೀ, ಸರ್ವೇಶ್ವರ ನಮ್ಮೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಬುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಬುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ," ಎನ್ನಲು, ಸರ್ವೇಶ್ವರ ಅವರನ್ನು ದಿಟ್ಟಿಸಿ ನೋಡಿ, "ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು," ಎಂದು ಹೇಳಿದರು. ಆಗ ಗಿದ್ಯಾನನು, "ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ?, ಮನಸ್ಸೆ ಕುಲದಿಂದ ನನ್ನ ಮನೆ ಕನಿಷ್ಠವಾದುದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು," ಎಂದನು. ಸರ್ವೇಶ್ವರ ಅವನಿಗೆ, "ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ," ಎಂದರು. ಗಿದ್ಯಾನನು: "ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು. ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು," ಎಂದು ಬಿನ್ನವಿಸಲು ಅವರು, "ನೀನು ತಿರುಗಿ ಬರುವವರೆಗೆ ನಾನು ಇಇಲ್ಲೇ ಇರುವೆನು," ಎಂದರು. ಗಿದ್ಯಾನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು, ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು. ಆಗ ದೇವದೂತನು ಅವನಿಗೆ, "ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ" ಎನ್ನಲು ಅವನು ಹಾಗೆಯೇ ಮಾಡಿದನು. ಆನಂತರ ಸರ್ವೇಶ್ವರನ ದೂತನು ತನ್ನ ಕೈ ಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು. ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, "ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಡಿಬಿಟ್ಟೆನಲ್ಲಾ"ಎಂದು ಕೂಗಿದನು. ಆದರೆ ಸರ್ವೇಶ್ವರನು ಅವನಿಗೆ, "ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ" ಎಂದನು. ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ "ಯೆಹೋವ ಷಾಲೋಮ್"ಎಂದು ಹೆಸರಿಟ್ಟನು.
ಕೀರ್ತನೆ: 85:9, 11-12, 13-14
ಶ್ಲೋಕ: ಭಯಭಕ್ತಿಯುಳ್ಳವರಿಗಾತ ರಕ್ಷಣೆ ಸನ್ನಿಹಿತ
ಶುಭಸಂದೇಶ: ಮತ್ತಾಯ 19:23-30
ಆಗ ಯೇಸುಸ್ವಾಮಿ ತಮ್ಮ ಶಿಷ್ಯರನು ಉದ್ದೇಶಿಸಿ, "ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೆಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ," ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು, "ಹಾಗಾದರೆ, ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?" ಎಂದು ಕೊಂಡರು. ಯೇಸು ಅವರನು ನಿಟ್ಟಿಸಿ ನೋಡುತ್ತಾ, "ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ," ಎಂದರು. ಪೇತ್ರನು ಆಗ ಮುಂದೆ ಬಂದು, "ನೋಡಿ ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?" ಎಂದು ಕೇಳಿದನು. ಅದಕ್ಕೆ ಯೇಸು, "ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೆಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣ ತಮ್ಮಂದಿರನ್ನಾಗಲಿ, ಅಕ್ಕ ತಂಗಿಯರನ್ನಾಗಲಿ, ತಂದೆ ತಾಯಿಯರನ್ನಾಗಲಿ, ಮಕ್ಕಳು ಮರಿಗಳನ್ನಾಗಲಿ, ಹೊಲ ಗದ್ದೆಗಳನ್ನಾಗಲಿ ತ್ಯೆಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರ ಜೀವಕ್ಕೆ ಬಾಧ್ಯಸ್ಥನಾಗುವನು. ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.
No comments:
Post a Comment