ಮೊದಲನೇ ವಾಚನ: ಯೆರೆಮೀಯ 1: 17-29
ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು. ನಾನು ಹೇಳುವುದನ್ನು ಗಮನದಿಂದ ಕೇಳು - ಈದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನ ಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನ್ನಾಗಿ ಮಾಡಿದ್ದೇನೆ; ಕೋಟೆ ಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ."
ಕೀರ್ತನೆ: 71:1-2, 3-4, 5-6, 15, 17
ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನ್ನು
ಶುಭಸಂದೇಶ: ಮಾರ್ಕ 6:17-29
ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು , "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವು ಆತನಿಗೆ ಬಾರದಂತೆ ನೋಡಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರೂ ಕೇಳು, ಕೊಡುತ್ತೇನೆ" ಎಂದನು. "ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ" ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಃದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೆ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ, "ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆ ಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು.
No comments:
Post a Comment