ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.10.19 - "ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ"

ಮೊದಲನೇ ವಾಚನ: ಜೆಕರ್ಯ  8:20-23 


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ:, "ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು. "ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ ನಮ್ಮೊಡನೆ ಬನ್ನಿ, ಹೋಗೋಣ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು. "ನಾನಾ ದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು. ಆ ದಿನಗಳಲ್ಲಿ ವಿವಿದ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, "ನಾವೂ ನಾಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ" ಎಂದು ಹೇಳುವರು.  ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ  ನುಡಿ," 

ಕೀರ್ತನೆ: 87:1-3, 4-5, 6-7 

ಶ್ಲೋಕ: ದೇವರು ನಮ್ಮೊಡನೆ ಇದ್ದಾರೆ 

ಶುಭಸಂದೇಶ: ಲೂಕ 9:51-56 

ತಾವು ಸ್ವರ್ಗಾರೋಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖರಾಗಿ ಹೊರಡಲು ನಿರ್ಧರಿಸಿದರು. ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು  ಸಮಾರಿಯದ ಒಂದು ಹಳ್ಳಿಗೆ ಬಂದರು. ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. ಇದನ್ನು ಕಂಡ ಶಿಷ್ಯನಾದ ಯಕೋಬ ಮತ್ತು ಯೊವಾನ್ನ, "ಪ್ರಭು, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಜೆಮಾಡಬಹುದಲ್ಲವೇ?" ಎಂದರು. ಯೇಸು ಅವರ ಕಡೆ ತಿರುಗಿ, "ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ" ಎಂದು ಅವರನ್ನು ಖಂಡಿಸಿದರು. ಆನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.

30.09.2019 - "ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾಧಿ"

ಮೊದಲನೇ ವಾಚನ: ಜೆಕರ್ಯ 8:1-8

ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃ ಕೊಟ್ಟ ಸಂದೇಶವಿದು "ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ  ವಿಷಯದಲ್ಲಿ ಅಧಿಕ ರೋಷವಿದೆ," ಸರ್ವೇಶ್ವರ ಇಂತೆನ್ನುತ್ತಾರೆ: "ಸಿಯೋನಿಗೆ ಹಿಂದಿರುಗುವೆನು.  ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ "ನಿಷ್ಠಾವಂತ ನಗರ" ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರ ಸರ್ವೇಶಶ್ವರನ ಪರ್ವತ ಎಂಬ ಹೆಸರು ಬರುವುದು. ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ; "ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ  ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು. ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು," ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: "ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ." ಇದು ಸರ್ವೇಶ್ವರನ ನುಡಿ. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. "ಇಗೋ, ನಾನು ನನ್ನ ಜನರನ್ನು ಪೂರ್ವ ಪಶ್ಚಿಮ ನಾಡುಗಳಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು. ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ, ಸದ್ಧರ್ಮದ ಪ್ರಜೆಗಳಾಗಿರುವರು.

ಕೀರ್ತನೆ: 102:15-17, 18-20, 21, 22

ಶ್ಲೋಕ: ಪುನರುದ್ಧರಿಸುವನು ಪ್ರಭು ಸಿಯೋನನು

ಶುಭಸಂದೇಶ: ಲೂಕ 9:46-50


ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಟನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದಿ ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು, "ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು," ಎಂದರು. ಆಗ ಯೊವಾನ್ನನು ಯೇಸುವಿಗೆ, "ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು," ಎಂದನು ಅದಕ್ಕೆ ಯೇಸು, "ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾಧಿ," ಎಂದು ಉತ್ತರಕೊಟ್ಟರು.

29.09.2019 - ಮನವೇ, ವಂದಿಸು ಪ್ರಭುವನು

ಮೊದಲನೇ ವಾಚನ: ಆಮೋಸ 6:1, 4-7

ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ! ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದುತಿನ್ನುವವರೇ, ನಿಮಗೆ ಧಿಕ್ಕಾರ! ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ! ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಂಗಧ ತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ  ನಿಶ್ಚಿಂತರಾಗಿದ್ದೀರಿ. ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.

ಕೀರ್ತನೆ: 146:7, 8-9, 9-10
ಶ್ಲೋಕ: ಮನವೇ, ವಂದಿಸು ಪ್ರಭುವನು

ಎರಡನೇ ವಾಚನ: 1ತಿಮೋಥೇಯನಿಗೆ 6:11-16

ಪ್ರಿಯನೇ, ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯ ಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸ ಪ್ರಮಾಣ ಮಾಡಿರುವೆ. ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲ್ಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ. ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಶುಭಸಂದೇಶ: ಲೂಕ 16:19-31

ಯೇಸು ಫರಿಸಾಯರಿಗೆ ಈ ಸಾಮತಿಯನ್ನು ಹೇಳಿದರು: "ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ - ತೊಡುಗೆಗಳನ್ನೂ  ನಯವಾದ ನಾರುಮಡಿಗೆಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರಿಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತ್ತಿದ್ದ ಲಾಜರನನ್ನೂ ಕಂಡ. "ಓ ಪಿತಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಿಗೆಗೆ  ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲೆಗೆ ಕಳುಹಿಸಿಕೊಡು" ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, "ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ. ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ," ಎಂದ. ಆಗ ಆ ಧನಿಕ, "ಪಿತಮಹ ಆಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ," ಎಂದು ಬೇಡಿಕೊಂಡ. ಅದಕ್ಕೆ ಅಬ್ರಹಾಮನು, "ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ," ಎಂದು ಉತ್ತರಕೊಟ್ಟ. "ಇಲ್ಲ ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು," ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತವಾಗಿ ಎದ್ದುಬಂದರೂ ಅವರು ನಂಬುವುದಿಲ್ಲ," ಎಂದರು."

28.09.2019 - "ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,"

ಮೊದಲನೇ ವಾಚನ: ಜೆಕರ್ಯ 2:1-5, 10, 11

ಜಕರ್ಯನಾದ ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ. "ಎಲ್ಲಿಗೆ ಹೋಗುತ್ತಿರುವೆ?" ಎಂದು ನಾನು ಅವನನ್ನು ಕೇಳಿದಾಗ, ಅವನು: "ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ," ಎಂದು ಉತ್ತರಕೊಟ್ಟನು. ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು, "ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: "ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು. ನಾನೇ ಅದರ ಸುತ್ತಮುತ್ತಲು ಅಗ್ನಿಪ್ರಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ," ಎಂದ." ಸರ್ವೇಶ್ವರ ಇಂತೆನ್ನುತ್ತಾರೆ: "ಎಲೈ ಸಿಯೋನ್ ನಗರವೇ ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!" ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಪವಿತ್ರ ಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.

ಯೆರೆಮೀಯ: 31:10, 11-12, 13

ಶ್ಲೋಕ: ಕುರಿಮಂದೆಯನ್ನು ಕಾಯುವ ಕುರುಬನಂತೆ, ಪ್ರಭು ನಮ್ಮನ್ನು ಕಾಪಾಡುವರು

ಶುಭಸಂದೇಶ : ಲೂಕ 9:43-45

ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವರಲ್ಲಿ, ಶಿಷ್ಯರಿಗೆ, "ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: "ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ," ಎಂದರು. ಯೇಸು ಹೇಳಿದ ಮಾತುನ್ನು  ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.

27.09.2019

ಮೊದಲನೇ ವಾಚನ: ಹಗ್ಗಾಯ  2:1-9

ಅದೇ ವರ್ಷದ ಏಳನೇ. ತಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಸರ್ವೇಶ್ವರ ಈ ಸಂದೇಶವನ್ನು ದಯಪಾಲಿಸಿದರು: ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ  ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು - "ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತದಲ್ಲವೇ? ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ.  ಇದು ಸೇನಾಧೀಶ್ವರ ಸರ್ವೇಶ್ವರನಾದನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ. ನೀವು ಈಜಿಪ್ಟ ದೇಶದಿಂದ ಹೊರಟುಬಂದಾಗ  ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ. ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನು ಸಮುದ್ರವನ್ನೂ ಮರುಭೂಮಿಯನ್ನು ಆದರಿಸುವೆನು. ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ. ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು. ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಟವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ,"

ಕೀರ್ತನೆ: 43:1, 2, 3, 4 
ಶ್ಲೋಕ: ಸ್ತುತಿಸುವೆನು ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ

ಶುಭಸಂದೇಶ: ಲೂಕ 9:18-22

ಒಮ್ಮ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. "ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?" ಎಂದು ಯೇಸು ಅವರನ್ನು ಪ್ರಶ್ನಿಸಿದರು. ಅದಕ್ಕೆ ಅವರು, "ಹಲವರು ತಮ್ಮನ್ನು ಸ್ನಾನಿಕ ಯೊವಾನ್ನ" ಎನ್ನುತ್ತಾರೆ; ಕೆಲವರು "ಎಲೀಯನು" ಎನ್ನುತ್ತಾರೆ; ಮತ್ತೆ ಕೆಲವರು "ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತವಾಗಿದ್ದಾನೆ" ಎನ್ನುತ್ತಾರೆ," ಎಂದು ಉತ್ತರವಿತ್ತರು. ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರಕೊಟ್ಟನು. ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು. ಇದಲ್ಲದೆ, "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ದಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

26.09.2019

ಮೊದಲನೇ ವಾಚನ: ಹಗ್ಗಾಯ 1:1-8

ಪರ್ಷಿಯಾದ ಚಕ್ರವರ್ತಿಯಾದ ಡೇರಿಸನು ಅವನ ಆಳ್ವಿಕೆಯ ಎರಡನೇ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನದೇಶಾಧಿಪತಿಯೂ ಆದ ಜೆರುಬ್ಬಾಬೇಲನ ಮತ್ತು ಯೆಹೋಚಾದಾಕನು ಮಗನೂ ಮಹಾಯಾಜಕನೂ ಆದ ಯೇಹೋಶುವನನ್ನು ಉದ್ಧೇಶಿಸಿ ಕೊಡಲಾದ ಸಂದೇಶವಾಗಿತ್ತು. ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: "ಮಹಾ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ‌. ಈ ಜನರು," ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೋಟ್ಟ ಸಂದೇಶವೇನೆಂದರೆ: "ನನ್ನ ಆಲಯ ಹಾಳುಬಿದ್ಧಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ? ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ. ನೀವು ಬಿತ್ತಿದ ಬೀಜ ಬಹಳ , ಪಡೆದ ಫಲ ವಿರಳ; ಎನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ," ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: "ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ. ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು," ಎಂದು ನುಡಿಯುತ್ತಾರೆ ಸ್ವಾಮಿ.

ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು

ಶುಭಸಂದೇಶ:  ಲೂಕ 9:7-9

ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತ ರಾಜ ಹೆರೋದನ ಕಿವಿಗೆ ಬಿದ್ದವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, "ಯೊವಾನ್ನನು ಮರಳಿ ಜೀವಂತವಾಗಿ ಎದ್ದಿದ್ದಾನೆ" ಎಂದು ಕೆಲವರೂ , "ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ", ಎಂದು ಇನ್ನೂ ಕೆಲವರೂ, "ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತವಾಗಿದ್ದಾನೆ," ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ, "ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದ್ದೆನಲ್ಲಾ! ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!" ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.

25.09.2019 - "ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ"

ಮೊದಲನೇ ವಾಚನ: ಎಜ್ರನು  9:5-9

ನಾನು ಎಜ್ರನು ಸಂಧ್ಯಾನ್ಯೆವೇದ್ಯ ಸಮರ್ಪಣೆಯ ನಂತರ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನೆತ್ತಿ ಹಿಗೆಂದು ಪ್ರಾರ್ಥಿಸಿದೆ: "ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ,, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾದ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ! ನಾವು ನಮ್ಮ ಪಪಿತ್ರುಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು. ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಿಮಗೆ ನಾನು ಪ್ರಸನ್ನರಾಗಿ, ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧ ಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪ ಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ. ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ  ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ , ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ  ಅಭಯಾಶ್ರಯ ಸಿಗುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿದ್ದೀರಿ.

ತೊಬೀತ: 13:2, 3-4, 4, 7-8

ಶ್ಲೋಕ: ನಿತ್ಯಕ್ಕೂ ದೇವರ  ಶ್ರೀನಾಮ ಪೂಜಿತವಾಗಲಿ

ಶುಭಸಂದೇಶ: ಲೂಕ 9:1-6


ಯೇಸುಸ್ವಾಮಿ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಎಲ್ಲ ದೆವ್ವಗಳನ್ನು ಬಿಡಿಸಲು  ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಆನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. ಕಳುಹಿಸುವಾಗ ಇಂತೆಂದರು: "ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ," ಎಂದರು. ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

24.09.2019 - "ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣ ತಮ್ಮಂದಿರು,"

ಮೊದಲನೇ ವಾಚನ: ಎಜ್ರನು  6:7-8, 12, 14-20


ಅರಸ ದಾರ್ಯಾವೇಷನು ಜೆರುಸಲೇಮಿನ ದೇವಾಲಯದ ಬಗ್ಗೆ ಬರೆದು ಕಳುಹಿಸಿದ ಅಪ್ಪಣೆ ಇದು: ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೇಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ. ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದದೆ ಎಲ್ಲ ವೆಚ್ಚವನ್ನು ಕೊಡಬೇಕು. ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಗಳನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಪಡಿಸುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು." ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಂದ ಪ್ರೇರಿತನಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದನು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಆರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು. ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು, ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು. ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು. ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.

ಕೀರ್ತನೆ: 122:1-2, 3-4, 4-5

ಶ್ಲೋಕ: ಪ್ರಭುವಿನಾಲಕ್ಕೆ  ಹೋಗೋಣ ಬಾ ಎಂದು, ಜನರೆನ್ನ ಕರೆದಾಗ ಆಯಿತೆನಗೆ ಆನಂದ

ಶುಭಸಂದೇಶ: ಲೂಕ 8:19-21


ಯೇಸುಸ್ವಾಮಿ ತಾಯಿ ಹಾಗೂ ಸಹೋದರರು ಯೇಸು ಇದ್ದಡೆಗೆ ಬಂದರು ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ. ಯೇಸುವಿಗೆ, "ನಿಮ್ಮ ತಾಯಿಯ ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ," ಎಂದು ತಿಳಿಸಲಾಯಿತು. ಅದಕ್ಕೆ ಯೇಸು, "ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣ ತಮ್ಮಂದಿರು," ಎಂದರು

23.09.2019 - "ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ,"

ಮೊದಲನೇ ವಾಚನ: ಎಜ್ರನು 1:1-6

ಸೈರಸನು ಪರ್ಷಿಯ ದೇಶದ ಅರಸ ಆತನ ಅಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು: "ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತುನ್ನು ಕೇಳಿರಿ: ಪರಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೋಟ್ಟಿದ್ದಾರೆ; "ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು"  ಎಂದು ಅವರು ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ! ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ," ಎಂದು ಪ್ರಚುರಪಡಿಸಿದನು. ಈ ಪ್ರಕಟಣೆಯನ್ನ ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು. ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳನ್ನು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಟವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.

ಕೀರ್ತನೆ: 126:1-2, 2-3, 4-5, 6

ಶ್ಲೋಕ:, ಪ್ರಭು ನಮಗೆ ಮಹತ್ಕಾರ್ಯ ಮಾಡಿದರು

ಶುಭಸಂದೇಶ: ಲೂಕ  8:16-28

"ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪ ಸ್ತಂಭದ ಮೇಲಿಡುತ್ತಾರೆ. ಬಟ್ಟ ಬಯಲಾಗದ ಮುಚ್ಚು ಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ. "ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ," ಎಂದರು.

22.09.2019 - "ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,"

ಮೊದಲನೇ ವಾಚನ: ಆಮೋಸ 8:4-7

ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನಬಡವರನ್ನು ನಿರ್ಮೂಲ ಮಾಡುವವರೇ,  ಕೇಳಿ, "ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ. ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ, ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ," ಎಂದುಕೊಳ್ಳುತ್ತೀರಿ ಅಲ್ಲವೆ?  ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ; ಖಂಡಿತವಾಗಿ ಅವರ ದುಷ್ಕ್ರತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ".

ಕೀರ್ತನೆ: 113:1-2, 4-6, 7-8

ಶ್ಲೋಕ: ಪ್ರಭುವಿನ ದಾಸರೇ, ಪ್ರಭುವಿನ ನಾಮಸ್ತುತಿಯನು ಮಾಡಿರಿ

ಎರಡನೇ ವಾಚನ: 1 ತಿಮೊಥೇಯನಿಗೆ 2:1-8

ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿ ಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು. ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ, ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ ಅವರೇ ಮಾನವರಾಗಿರುವ ಕ್ರಿಸ್ತ ಯೇಸು. ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು. ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.

 ಶುಭಸಂದೇಶ: ಲೂಕ 16:1-13

 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: "ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, "ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು," ಎಂದ. ಆಗ ಮೇಸ್ತ್ರಿ "ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ," ಎಂದು ಚಿಂತಕ್ರಾಂತನಾದ. ಮರುಕ್ಷಣ, "ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು," ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು,  "ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?" ಎಂದು ಮೊದಲನೆಯವನನ್ನು ಕೇಳಿದ. ಅವನು, "ನೂರು ಬುದ್ದಲಿ ಎಣ್ಣೆ," ಎಂದ. ಅದಕ್ಕೆ ಮೇಸ್ತ್ರಿ, "ಇಗೋ, ನಿನ್ನ ಪತ್ರ, ಕುಳಿತುಕೊಂಡು "ಐವತ್ತು" ಎಂದು ಬೇಗನೆ ಬರೆ," ಎಂದ. ಬಳಿಕ ಇನ್ನೊಬ್ಬನನ್ನು ಕರೆದು, "ನೀನೆಷ್ಟು ಸಾಲ ತೀರಿಸಬೇಕು?" ಎಂದು ಕೇಳಿದ. ಅವನು "ನೂರು ಖಂಡುಗ ಗೋದಿ" ಎಂದಾಗ  "ಇಗೋ ನಿನ್ನ ಪತ್ರ, "ಎಂಬತ್ತು" ಎಂದು ಬರೆ", ಎಂದ ಈ ಅಪ್ರಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ. ಏಕೆಂದರೆ, ತಮ್ಮತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು. ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು. ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣೆಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೋಡ್ಡ ವಿಷಯಗಳಲ್ಲೂ ದ್ರೋಹ ಮಾಡುತ್ತಾನೆ. ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು? ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆ ಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು? ಯಾವನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾಗದು; ಅವನು ಒಬ್ಬನನ್ನು ದ್ವೇಶಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು," ಎಂದರು.

21.09.2019 - "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ"

ಮೊದಲನೇ ವಾಚನ: ಎಫೆಸಿಯರಿಗೆ 4:1-7, 11-13


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲು ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ, ದೇವರೂ ಒಬ್ಬರೇ, ಸರ್ವರ ತಂದೆಯೂ ಇವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮುಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತ ಯೇಸು ಅನುಗ್ರಹಿಸಿರುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: ಈ ವೆಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕ್ಯಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತ ಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಕೀರ್ತನೆ: 19:2-3, 4-5

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

ಶುಭಸಂದೇಶ: ಮತ್ತಾಯ  9:9-13

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬುವನನ್ನು ಕಂಡರು. ಅವನು ಸಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತ್ತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರೂ ಪಾಪಿಷ್ಠರು ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನುದ್ದೇಶಿಸಿ, "ನಿಮ್ಮ ಗುರು ಇಂತಹ ಬಹಿಷ್ಕ್ರತ ಜನರ ಜೊತೆಯಲ್ಲಿ ಊಟ ಮಾಡುವುದೇ?" ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ" ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು," ಎಂದರು.

20.09.2019 - "ಸತ್ಸಂಬಂದ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು"

ಮೊದಲನೇ ವಾಚನ: 1ತಿಮೊಥೇಯನಿಗೆ  6:2-12

ಅತಿ ಪ್ರಿಯನೆ, ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು. ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ, ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಆಹಂಭಾವಿ ಹಾಗೂ ಅಜ್ಞಾನಿಯೇ ಸರಿ. ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ  ಎಡೆಕೊಡುತ್ತವೆ. ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ  ಸಾಧನವೆಂದೇ ಇವರ ನಂಬಿಕೆ. ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ. ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡೊಯ್ಯುವುದಿಲ್ಲ. ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು. ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಾಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ  ವಿನಾಶಕ್ಕೂ ಒಯ್ಯುತ್ತವೆ. ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ. ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂದ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.

ಕೀರ್ತನೆ: 49:6-7, 8-10, 17-18, 19-20

ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು



ಶುಭಸಂದೇಶ: ಲೂಕ 8:1-3



ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರ ಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು. ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು, ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

19.09.2019 - "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ"

ಮೊದಲನೇ ವಾಚನ: 1 ತಿಮೊಥೇಯನಿಗೆ 4:12-16


ಅತಿ ಪ್ರಿಯನೇ, ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು. ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲಿಯೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು. ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತ ನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ? ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು; ಇವುಗಳಲ್ಲೇ ಮಗ್ನನಾಗಿರು. ಇದರಿಃದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.

ಕೀರ್ತನೆ: 111:7-8, 8, 9, 10
ಶ್ಲೋಕ: ಮಹತ್ತಾದವು ಪ್ರಭುವಿನ ಕಾರ್ಯಗಳು

ಶುಭಸಂದೇಶ: ಲೂಕ 7:36-50

ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.  ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು, ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತ್ತಿದ್ದಾರೆಂದು ಕೇಳಿ ಬಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾ ನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು,  ಸುಗಂಧ ತೈಲವನ್ನು ಹಚ್ಚಿದಳು ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, "ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು ಎಂದು ತಿದುಕೊಳ್ಳುತ್ತಿದ್ದನು" ಎಂದು ತನ್ನೊಳಗೆ ಅಂದುಕೊಂಡನು. ಅದಕ್ಕೆ ಯೇಸು,  "ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನೂ ಮನ್ನ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?" ಎಂದು ಕೇಳಿದರು. ಅದಕ್ಕೆ ಸಿಮೋನನು, "ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ," ಎಂದನು. "ಸರಿಯಾಗಿ ಹೇಳಿದೆ," ಎಂದರು ಯೇಸು. ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, "ಈಕೆಯನ್ನು ನೋಡಿದೆಯಾ ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರೆಸಿದಳು. ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ  ಮುತ್ತಿಡುವುದನ್ನು ನಿಲ್ಲಿಸಿಲ್ಲ; ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು. ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರು ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ," ಎಂದರು. ಆನಂತರ ಯೇಸು ಆ ಮಹಿಳೆಗೆ: "ನಿನ್ನ  ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, "ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?" ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು. ಯೇಸು ಆಕೆಗೆ, "ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು," ಎಂದರು.

18.09.2019 - "ದೈವಜ್ಞಾನವೇ ನಿಜವಾದ ಜ್ಞಾನ"

ಮೊದಲನೇ ವಾಚನ: 1ತಿಮೊಥೇಯನಿಗೆ  3:14-16

ಪ್ರಿಯ ಸಹೋದರನೇ, ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.  ಒಂದು ವೇಳೆ ನಾನು ಬರುವುದು ತಡವಾದರೆ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ. ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಟವಾದುದ್ದು ಎಂಬುದು ನಿಸ್ಸಂದೇಹವಾದ ವಿಷಯ. "ನರಮಾನವ ರೂಪದಲ್ಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗೆ ದೇವದೂತರಿಗೆ ಪ್ರದರ್ಶಿತನಾಗಿ, ಅನ್ಯಜನರಿಗೆ ಪ್ರಬೋದಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ."

ಕೀರ್ತನೆ: 111:1-2, 3-4, 5-6

ಶ್ಲೋಕ: ಮಹತ್ತಾದವು ಪ್ರಭುವಿನ ಕಾರ್ಯಗಳು

ಶುಭಸಂದೇಶ : ಲೂಕ 7:31-35


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ?  ಇವರು ಯಾರನ್ನು ಹೋಲುತ್ತಾರೆ? ಪೇಟೆಬೀದಿಗಳಲ್ಲಿ ಕುಳಿತು, "ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ" ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, "ಅವನಿಗೆ ದೆವ್ವ ಹಿಡಿದಿದೆ," ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, "ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ," ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.

17.09.2019 - "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,"

ಮೊದಲನೇ ವಾಚನ: 1 ತಿಮೊಥೇಯನಿಗೆ  3:1-13

ಅತಿ ಪ್ರಿಯನೇ , ಯಾರಾದರೂ ಧರ್ಮಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ. ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೊಧಿಸುವುದರಲ್ಲಿ ಪ್ರವೀಣನಾಗಿರಬೇಕು. ಅವನು ಕುಡುಕನು, ಕಲಹ ಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು. ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನೂ ಪಡೆದುಕೊಳ್ಳುವವನೂ ಆಗಿರಬೇಕು. ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಪಾಲಿಸಿಯಾನು? ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು. ಇಲ್ಲದಿದ್ದರೆ ಆಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು. ಕ್ರೈಸ್ಥರಲ್ಲದವರಿಂದಲೂ ಆತನು ಒಳ್ಳೆಯವನೆನಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು. ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು. ವಿಶ್ವಾಸದ ನಿಗೂಢ ರಹಸ್ಯಗಳನ್ನು ಶುದ್ಧ ಮನಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು. ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡು ಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು. ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರು ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು. ನಿಷ್ಠೆಯಿಂದ ಸೇವೆಸಲ್ಲಿಸುವ  ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ. ಕ್ರಿಸ್ತ ಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನ ಪಡೆಯುತ್ತಾರೆ.

ಕೀರ್ತನೆ: 101:1-2, 2-3, 5, 6

ಶ್ಲೋಕ: ಪ್ರಭೂ, ಸನ್ಮಾರ್ಗದಲೇ ನಾ ನಡೆಯುವೆನು.

ಶುಭಸಂದೇಶ: ಲೂಕ 7:11-17


ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು ಊರ ಬಾಗಿಲನ್ನು ಸಮೀಪಿಸುದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು "ಅಳಬೇಡ" ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು," ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. "ಮಹಾ ಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ;  ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ," ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

16.09.2019 - "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ"

ಮೊದಲನೇ ವಾಚನ: 1 ತಿಮೊಥೇಯನಿಗೆ 2:1-8


ಮೊತ್ತ ಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ  ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತವಾಗಿ ಶಾಂತಿ ಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು. ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ, ದೇವರು ಒಬ್ಬರೇ,  ಅವರೇ ಮಾನವರಾಗಿರುವ ಕ್ರಿಸ್ತಯೇಸು. ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.  ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು.  ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.

ಕೀರ್ತನೆ: 28:2, 7, 8-9

ಶ್ಲೋಕ: ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು

ಶುಭಸಂದೇಶ: ಲೂಕ 7:1-10


ಜನರಿಗೆ ಮನಮುಟ್ಟುವಂತೆ ಬೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳೆ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕರನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಆರ್ಹನು. ನಮ್ಮ ಜನರ ಮೆಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ  ನಮ್ಮ ಪ್ರಾರ್ಥನಾ ಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ ಶತಾಧಿಪತಿ ತನ್ನ ಗೆಳೆಯರ ಮುಖಾಂತರ, "ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು  ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು "ಬಾ, ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು," ಎಂದರೆ ಹೋಗುತ್ತಾನೆ. ಸೇವಕನಿಗೆ "ಇಂಥದ್ದನ್ನು ಮಾಡು," ಎಂದರೆ ಮಾಡುತ್ತಾನೆ," ಎಂದು ಹೇಳಿ ಕಳುಹಿಸಿದನು. ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು  ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು. ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥವಾಗಿದ್ದುದನ್ನು ಕಂಡರು.

15.09.2019 - "ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ"

ಮೊದಲನೇ ವಾಚನ: ವಿಮೋಚನಕಾಂಡ 32:7-11, 13-14

ಸರ್ವೇಶ್ವರ ಮೋಶೆಗೆ, "ನೀನು ಕೂಡಲೆ ಬೆಟ್ಟದಿಂದ ಇಳಿದು ಹೋಗು. ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದು ಬಿಟ್ಟು ತಮಗೇ ಲೋಹದ ಹೋರಿ ಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡ ಬಿದ್ದು, ಬಲಿಗಳನರ್ಪಿಸಿ, "ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು" ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು. ಆದ ಕಾರಣ ನೀನು ನನಗೆ ಅಡ್ಡ ಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು." ಎಂದು ಹೇಳಿದರು. ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: "ಸ್ವಾಮಿ ಸರ್ವೇಶ್ವರ, ಮಹಾಶಕ್ತಿಯಿಂದಲೂ ಬುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ? ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣಮಾಡಿ ಅವರಿಗೆ, "ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು" ಎಂದು ತಾವು ಮಾತುಕೊಡಲಿಲ್ಲವೆ?" ಎಂದನು. ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.

ಕೀರ್ತನೆ: 51:1-2, 10-11, 15, 17

ಶ್ಲೋಕ: ನಾನು ಇದೀಗಲೇ ಹೊರಟು ತಂದೆಯ ಬಳಿಗೆ ಹೋಗುತ್ತೇನೆ

ಎರಡನೇ ವಾಚನ: 1 ತಿಮೊಥೇಯನಿಗೆ 1:12-17

ತಿಮೊಥೇಯನೇ, ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿ ಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ  ಮಾಡಿದ್ದರಿಂದ ದೇವರು ನನಗೆ ಕರುಣೆ ತೋರಿದರು. ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.  ಕ್ರಿಸ್ತ ಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು. ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು. ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತ ಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ. ಸರ್ವ ಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.

ಶುಭಸಂದೇಶ: ಲೂಕ 15:1-32


ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,"ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು;  "ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ "ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ," ಎನ್ನುತ್ತಾನೆ, ಅಲ್ಲವೆ? ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೆ?  ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು "ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು. ನನ್ನೊಡನೆ ಸೇರರಿ ಸಂತೋಷಪಡಿ," ಎನ್ನುತ್ತಾಳಲ್ಲವೆ? ಅದೇ ಮೇರೆಗೆ ಪಶ್ಚಾತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ," ಎಂದರು. ಯೇಸುಸ್ವಾಮಿ ಮುಂದುವರಿಸುತ್ತಾ ಈ ಸಾಮತಿಯನ್ನು ಹೇಳಿದರು: ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಅವರಲ್ಲಿ ಕಿರಿಯವನು  "ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು," ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ. ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲು ಮಾಡಿಬಿಟ್ಟ. ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶಾದಾದ್ಯಂತ ಘೋರವಾದ ಕ್ಷಾಮ ತಲೆದೋರಿತು. ನಿರ್ಗತಿಕನಾದ ಅವನು ಹೋಗಿ, ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ. ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ. ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ. ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ; ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ" ಎಂದು ಬೇಡಿಕೊಳ್ಳುತ್ತೇನೆ, ಎಂದುಕೊಂಡ. ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. ಮಗನು ಇನ್ನೂ ಅಷ್ಟುದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು  ಮುತ್ತಿಟ್ಟ. ಆದರೂ ಮಗನು, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ" ಎಂದ. ತಂದೆಯಾದರೋ ಆಳುಗಳನ್ನು ಕರೆದು, ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ ಬೆರಳಿಗೆ ಉಂಗುರವನ್ನು ತೊಡಿಸಿರಿ. ಕಾಲಿಗೆ ಪಾದರಕ್ಷೆಗಳನ್ನು ಮೆಟ್ಟಿಸಿರಿ; ಕೊಬ್ಬಿಸಿದ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ. ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ," ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.  ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ನಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು. "ಮನೆಯಲ್ಲೇನು ವಿಶೇಷ?" ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. "ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಕರುವನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ," ಎಂದು ಆಳು ತಿಳಿಸಿದ. ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ ಅವನು, "ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆ ಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ. ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಕರುವನ್ನು ಕೊಯ್ಯಿಸಿದ್ದೀರಿ!" ಎಂದು ವಾದಿಸಿದ. ಆಗ ತಂದೆ ಅವನಿಗೆ, ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ. ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ, ಈಗ ಬದುಕಿಬಂದಿದ್ದಾನೆ. ತಪ್ಪಿ ಹೋಗಿದ್ದ, ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೇ?" ಎಂದನು."

14.09.2019 - "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು"

ಮೊದಲನೇ ವಾಚನ: ಸಂಖ್ಯಾಕಾಂಡ - 21:4-9


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ  ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 78:1-2, 34-38

ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು

ಎರಡನೇ ವಾಚನ: ಫಿಲಿಪ್ಪಿಯರಿಗೆ 2:6-11

ಜೀವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವ ಪರಮನು, ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು,  "ಕ್ರಿಸ್ತ ಯೇಸುವೇ ಪ್ರಭು", ಎಂದೆಲ್ಲರಿಗೆ ಅರಿಕೆ ಮಾಡುವರು ಪಿತ ದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಶುಭಸಂದೇಶ: ಯೊವಾನ್ನ 3:13-17



ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

13.09.19 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"

ಮೊದಲನೇ ವಾಚನ: 1 ತಿಮೊಥೇಯನಿಗೆ 1:1-2, 12-14

ಕ್ರೈಸ್ತ ವಿಶ್ವಾಸದಲ್ಲಿ ಸತ್ ಪುತ್ರನಾದ ತಿಮೊಥೇಯನಿಗೆ - ಪೌಲನು ಬರೆಯುವ ಪತ್ರ. ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತ ಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತ ಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ಶುಭ ಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹಿಂದೆ ನಾನು ಅವರನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆ ತೋರಿದರು. ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.

ಕೀರ್ತನೆ: 16:1-2, 5, 6-7, 8-9

ಶ್ಲೋಕ: ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ ಪ್ರಭು

ಶುಭಸಂದೇಶ: ಲೂಕ 6:39-42


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: "ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೇ? ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, "ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ," ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು, ಆನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು,"

12.09.19 - "ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,"

ಮೊದಲನೇ ವಾಚನ: ಕೊಲೊಸ್ಸೆಯರಿಗೆ 3:12-17

ಸಹೋದರರೇ, ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು, ದೇವರ ಸ್ವಂತ ಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣವಾಗಿರಲಿ. ಒಬ್ಬರನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪು ಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ. ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು  ಸಂಪೂರ್ಣಗೊಳಿಸುವ ಬಂಧನ. ನಿಮ್ಮ ಹೃನ್ಮನಗಳು ಕ್ರಿಸ್ತ ಯೇಸುವಿನ ಶಾಂತಿ ಸಮಾಧಾನದಿಂದ ತುಂಬಿರಲಿ. ನೀವು ಒಂದೇ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ;  ಕೃತಜ್ಞತೆಯುಳ್ಳವರಾಗಿ ಜೀವಿಸಿರಿ. ಕ್ರಿಸ್ತ ಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ರಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ. ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.

ಕೀರ್ತನೆ: 150:1-2, 3-4, 5-6

ಶ್ಲೋಕ: ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ

ಶುಭಸಂದೇಶ: ಲೂಕ 6:27-38 



ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: "ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು. ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೇ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಟರು ಸಹ ಹಾಗೆಯೇ ಮಾಡುತ್ತಾರಲ್ಲವೇ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಟರು ಸಹ ಸಾಲ ಕೊಡುತ್ತಾರಲ್ಲವೆ? ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವರಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ, ಆಗ ದೇವರೂ ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು," ಎಂದರು.

11.09.2019 - "ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! "

ಮೊದಲನೇ ವಾಚನ: ಕೊಲೊಸ್ಸೆಯರಿಗೆ 3:1-11 

ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ದಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನ ಕೊಡಿ. ಕ್ರಿಸ್ತ ಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ. ನೀವು ಕ್ರಿಸ್ತ ಯೇಸುವಿನೊದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ. ಕ್ರಿಸ್ತ ಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವು ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ. ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ, ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ. ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ. ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿ ನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದೀರಿ. ಈಗಲಾದರೋ ಕೋಪ, ರೋಷ, ಮತ್ಸರ ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು. ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ. ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ. ಇಂಥ ಹೊಸ ಜೀವನದಲ್ಲಿ ಯೆಹೂದ್ಯ - ಗ್ರೀಕ, ಸುನ್ನತಿ ಹೊಂದಿದವ - ಸುನ್ನತಿ ಇಲ್ಲದವ, ನಾಗರಿಕ - ಅನಾಗರಿಕ, ಯಜಮಾನ - ಗುಲಾಮ ಎಂಬ ಭಿನ್ನಭೇದಗಳಿಲ್ಲ. ಕ್ರಿಸ್ತ ಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.

ಕೀರ್ತನೆ: 145:2-3, 10-11, 12-13

ಶ್ಲೋಕ: ಪ್ರಭುವಿನ ಕರುಣೆ ಎಲ್ಲರ ಮೇಲೆ

ಶುಭಸಂದೇಶ: ಲೂಕ 6:20-26


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು:  "ದೀನದಲಿತರೇ,,  ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕು ನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

10.09.2019 - ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

ಮೊದಲನೇ ವಾಚನ: ಕೊಲೊಸ್ಸೆಯರಿಗೆ 2:6-15

ನೀವು ಯೇಸುಕ್ರಿಸ್ತರನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ  ಐಕ್ಯೆತೆಯಿಂದ ಬಾಳಿರಿ. ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ, ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ. ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ. ಸಕಲ ಅಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ. ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೇ ಯೋಜಿಸಿದ ‌ಸುನ್ನತಿ. ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತ ಯೇಸುವನ್ನು ಮೃತರ ಮಧ್ಯದಿಂದ ದೈವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು. ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದಿರಿ. ಆದರೆ ಈಗ ದೇವರು ಕ್ರಿಸ್ತ ಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ. ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂದಿಸಿದ್ದ ಧರ್ಮಶಾಸ್ತ್ರದ ವಿಧಿ ನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ. ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.

ಕೀರ್ತನೆ: 145:1-2, 8-9, 10-11

ಶ್ಲೋಕ: ಪ್ರಭುವಿನ ಕರುಣೆ ಎಲ್ಲರ ಮೇಲೆ

ಶುಭಸಂದೇಶ: ಲೂಕ 6:12-19


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡರು, ಅವರಿಗೆ "ಪ್ರೇಷಿತರು" ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು; ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೋಲೊಮಾಯ, ಮತ್ತಾಯ ಮತ್ತು ತೋಮ, ಆಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಆನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

09.09.2019 - "ನಿನ್ನ ಕೈಯನ್ನು ಚಾಚು"

ಮೊದಲನೇ ವಾಚನ: ಕೊಲೊಸ್ಸೆಯರಿಗೆ: 1:24-2:3

ಸಹೋದರರೇ, ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತ ಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ. ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು, ಅಂದರೆ ತಮ್ಮ ವಾಕ್ಯವನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ. ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ. ನಾವು ಸಾರುತ್ತಲಿರುವುದೂ  ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿ ಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತ ಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ. ನಿಮಗಾಗಿಯೂ ಲವೊದಿಕೀಯರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಯಬಯಸುತ್ತೇನೆ. ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತ ಯೇಸುವನ್ನು ಅರಿತುಕೊಳ್ಳಲು ಸಾಧ್ಯ. ಕ್ರಿಸ್ತ ಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.

ಕೀರ್ತನೆ: 62:6-7,9

ಶ್ಲೋಕ: ಭದ್ರವಾದ ಬಂಡೆ, ನನಗಾಶ್ರಯ ದೇವನೇ

ಶುಭಸಂದೇಶ: ಲೂಕ 6:6-11


ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶ ಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು  ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈಯುಳ್ಳವನಿಗೆ, "ಬಂದು ಇಲ್ಲಿ ನಿಲ್ಲು," ಎಂದರು. ಅವನು ಎದ್ದು ಬಂದು ನಿಂತನು. ಆಗ ಯೇಸು ಅವರಿಗೆ, "ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?" ಎಂದರು. ಆನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆ ತಿರುಗಿ, "ನಿನ್ನ ಕೈಯನ್ನು ಚಾಚು," ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.

08.09.2019 - "ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ":

ದೇವಮಾತೆಯ ಮಹೋತ್ಸವ 



ಮೊದಲನೇ ವಾಚನ: ಸುಜ್ಞಾನ ಗ್ರಂಥ 9:13-18

ದೇವರ ಸಂಕಲ್ಪವನ್ನು ಅರಿಯಬಲ್ಲವನಾರು? ಸರ್ವೇಶ್ವರನ ಚಿತ್ತವೇನೆಂದು ಗ್ರಹಿಸಬಲ್ಲವನಾರು? ಮರ್ತ್ಯ ಮಾನವರ ವಿವೇಚನೆ ಅಸಮರ್ಪಕವಾದುದೇ ನಮ್ಮ ಯೋಜನೆಗಳೆಲ್ಲ ಕೈಗೂಡದೆ ಹೋಗುವಂಥವೇ. ಈ ನಶ್ವರ ದೇಹ ಅಂತರಾತ್ಮವನ್ನು ಕುಗ್ಗಿಸುತ್ತದೆ ಈ ಮಣ್ಣಿನ ಗುಡಾರ, ಚಿಂತಾಭರಿತ ಮನಕ್ಕೊಂದು ಭಾರವೇ. ಧರೆಯ ಮೇಲಿನ ವಿಷಯಗಳನ್ನು ತಿಳಿಯುವುದೆಷ್ಟೋ ಕಷ್ಟಕರ  ಕೈಗೆಟಕುವುಗಳನ್ನೇ ಕಂಡರಿತುಕೊಳ್ಳುವುದು ಎಷ್ಟೋ ಪ್ರಯಾಸಕರ. ಇಂತಿರಲು, ಸ್ವರ್ಗದಲ್ಲಿರುವುದನು ಬದಲಿಗೆ ತರಲು ಯಾರು ಸಮರ್ಥ? ನೀವು ನಿಮ್ಮ ಸುಜ್ಞಾನವನ್ನು ಅನುಗ್ರಹಿಸದೆ ಹೋಗಿದ್ದರೆ ನಿಮ್ಮ ಪವಿತ್ರಾತ್ಮನನ್ನು ಸ್ವರ್ಗದಿಂದ ಕಳುಹಿಸದೆ ಹೋಗಿದ್ದರೆ ನಿಮ್ಮ ಸಂಕಲ್ಪವನ್ನು ಯಾರಾದರು ಅರಿಯುತ್ತಿದ್ದರೇ? ಹೀಗೆ ಲೋಕದ ಮಾರ್ಗಗಳನ್ನು ತಿದ್ದಲಾಯಿತು, ನಿಮಗೆ ಮೆಚ್ಚುಗೆಯಾದುದನು ಜನರಿಗೆ ಕಲಿಸಲಾಯಿತು, ಸುಜ್ಞಾನದಿಂದಲೇ ಅವರಿಗೆ ರಕ್ಷಣೆ ಲಭಿಸುವಂತಾಯಿತು.

ಕೀರ್ತನೆ: 90:3-6, 12-13, 14, 17

ಶ್ಲೋಕ: ಪ್ರಭು, ತಲತಲಾಂತರಕ್ಕೆ ಶ್ರೀನಿವಾಸ ನೀನೆಮಗೆ

ಎರಡನೇ ವಾಚನ: ಫಿಲೆಮೋನನಿಗೆ 1:9-10, 12-17

ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿಮ್ಮಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ. ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲಿ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ. ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯ ಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು. ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಕಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನಿನಗಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ. ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ. ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ, ಅದಕ್ಕಿಂತಲೂ ಬಹಳ  ಮೇಲಾದವನಂತೆ, ಕ್ರಿಸ್ತ ಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ? ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನೂ ಸ್ವಾಗತಿಸು.

ಶುಭಸಂದೇಶ: ಲೂಕ 14:25-33


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: "ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ- ಮಕ್ಕಳು, ಸೋದರ- ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬಾರದವನುನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, "ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!" ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.